ಬೆಂಗಳೂರು: ಗಣೇಶ ಚತುರ್ಥಿ ಮತ್ತು ಮೊಹರಂ ಆಚರಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿನ ಹಬ್ಬಗಳಿಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಹಬ್ಬಗಳಲ್ಲಿ ಕೊರೊನಾ ನಿಯಮ ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಗಣೇಶ ಹಬ್ಬ ಆಚರಿಸುವ ದೇಗುಲಗಳಲ್ಲಿ ನಿತ್ಯ ಸ್ಯಾನಿಟೈಸೇಷನ್ ನಡೆಸಬೇಕು. ದೇಗುಲಗಳಲ್ಲಿ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೇಗುಲಗಳಲ್ಲಿ ಭಕ್ತರಿಗೆ ಕನಿಷ್ಠ 6 ಅಡಿ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಹೊರಾಂಗಣದಲ್ಲಿ ಚಪ್ಪರ, ಪೆಂಡಾಲ್ ಹಾಕುವಂತಿಲ್ಲ. ಚಪ್ಪರ, ಪೆಂಡಾಲ್, ಶಾಮಿಯಾನದ ವೇದಿಕೆ ನಿರ್ಮಿಸುವಂತಿಲ್ಲ. ವಿಸರ್ಜನೆ ವೇಳೆ ಮನರಂಜನೆ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ನಿಯಮ ಜಾರಿಗೊಳಿಸಿದೆ.
ಮೊಹರಂ ಪ್ರಾರ್ಥನಾ ಸಭೆ, ಮೆರವಣಿಗೆಗೆ ನಿಷೇಧಿಸಲಾಗಿದೆ. ಸೂಕ್ತ ದೈಹಿಕ ಅಂತರ ಪಾಲಿಸಿ ಕನಿಷ್ಠ ಸಂಖ್ಯೆಯಲ್ಲಿ ಭಾಗಿಯಾಗಬಹುದಾಗಿದೆ. ಆಲಂ/ಪಂಜಾ, ತಾಜಿಯತ್ಗಳನ್ನು ಜನರು ಮುಟ್ಟುವಂತಿಲ್ಲ. ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವಂತೆ 10 ವರ್ಷದೊಳಗಿನವರಿಗೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಸೂಚನೆ ನೀಡಲಾಗಿದೆ. ಪ್ರಾರ್ಥನೆ ವೇಳೆ ಕನಿಷ್ಠ 6 ಅಡಿ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದು ರಾಜ್ಯ ಸರ್ಕಾರ ಪ್ರಕಟಿಸಿರುವ ನಿಯಮಾವಳಿಯಲ್ಲಿ ಸೂಚಿಸಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್