ಶಿವಮೊಗ್ಗ: ನೆರೆಹೊರೆ ರಾಜ್ಯಗಳಲ್ಲಿ ಕೋವಿಡ್ 19 ರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಮುಂದೆ ಸಂಭವಿಸಬಹುದಾದ ಕೋವಿಡ್ 19 ಮೂರನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ಹಿಂದೆ ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಳಕಂಡಂತೆ ತಿದ್ದುಪಡಿ ಮಾಡಿ ಆದೇಶಿಸಿರುತ್ತಾರೆ.
• ಜಿಲ್ಲಾ ವ್ಯಾಪ್ತಿಯ ಎಲ್ಲಾ ಲಾಡ್ಜ್, ಹೋಟೆಲ್, ಹೋಂ ಸ್ಟೇ/ಅರಣ್ಯ ಇಲಾಖೆ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಸದರಿ ಪ್ರವಾಸಿಗರು ಚೆಕ್ಇನ್ ದಿನದಿಂದ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್ಟಿಪಿಸಿಆರ್ ನೆಗೆಟಿವ್ ವರದಿ/ಆರ್ಎಟಿ ನೆಗೆಟಿವ್ ವರದಿ/ಕೋವಿಡ್ 2ನೇ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ.
ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ಜೋಗ್ ಜಲಪಾತ, ಆಗುಂಬೆಯ ಸೂರ್ಯಾಸ್ಥ ವೀಕ್ಷಣೆಯ ಸ್ಥಳ, ಗಾಜನೂರು ಡ್ಯಾಂ, ಬಿ.ಆರ್.ಪಿ ಡ್ಯಾಂ, ಹುಲಿ ಮತ್ತು ಸಿಂಹಧಾಮ, ಸಕ್ರೆಬೈಲು ಆನೆ ಬಿಡಾರ ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹಿಂದಿನ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್ಟಿಪಿಸಿಆರ್ ನೆಗೆಟಿವ್ ವರದಿ/ಆರ್ಎಟಿ ನೆಗೆಟಿವ್ ವರದಿ/ಕೋವಿಡ್ 2ನೇ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರಬೇಕಾದ್ದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್