ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಂದು ಮುಂಜಾನೆ ಇಬ್ಬರು ಸಾವನ್ನಪ್ಪಿದ್ದಾರೆ.
ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಚೇನಹಳ್ಳಿ ಡೈರಿ ಸಮೀಪ ನಡೆದ ಭೀಕರ ಅಪಘಾತದಲ್ಲಿ ಬೆಳ್ಳಂಬೆಳಗ್ಗೆಯೇ ಇಬ್ಬರು ಸಾವನ್ನಪ್ಪಿದ್ದಾರೆ.
ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ದಾಟಿ ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಭದ್ರಾವತಿ ಪೇಪರ್ ಟೌನ್ ಬಡಾವಣೆ ಇಬ್ಬರು ನಿವಾಸಿಗಳು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.
ಲಾರಿ ಚಾಲಕನ ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಕಾರಿನಲ್ಲಿ ಸಿಲುಕಿಕೊಂಡವರನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ಅಪಘಾತ ಸ್ಥಳದಲ್ಲಿ ಕೆಲ ಸಮಯ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


