ಹಿರಿಯ ಸಾಹಿತಿ,ಕನ್ನಡಪರ ಹೋರಾಟಗಾರ ಚಂಪಾ ನಿಧನ :

ಕವಿ, ನಾಟಕಕಾರ, ಕನ್ನಡಪರ ಹೋರಾಟಗಾರ ಪ್ರೊ.ಚಂದ್ರಶೇಖರ್ ಪಾಟೀಲ್ (ಚಂಪಾ) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು. 

ಅವರಿಗೆ 82 ವರ್ಷ ವಯಸ್ಸಾಗಿತ್ತು.ಅನಾರೋಗ್ಯದಿಂದ ಬಳಲುತ್ತಿದ್ದ ಚಂಪಾ ಅವರು ಇಂದು ಬೆಳಗ್ಗೆ ನಗರದ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಮೃತರು , ಒಬ್ಬ ಪುತ್ರ, ಒಬ್ಬರು ಪುತ್ರಿ ಸಹಿತ ಅಪಾರ ಬಂಧುಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ.

ಪಾರ್ಥಿವ ಶರೀರವನ್ನು ನಗರದ ಯಲಚೇನಹಳ್ಳಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು. ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರಾಗಿದ್ದ ಪ್ರೊ.ಚಂದ್ರಶೇಖರ್ ಪಾಟೀಲ್ ಅವರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು. ಕಾಲೇಜು ವಿದ್ಯಾರ್ಥಿಯಾಗಿದ್ದಾಗ ವಿ.ಕೃ.ಗೋಕಾಕರ ಮಾರ್ಗದರ್ಶನ ಸಿಕ್ಕಿತ್ತು. ವಿದ್ಯಾರ್ಥಿಯಾಗಿದ್ದಾಗಲೇ ಅವರ ಪ್ರಥಮ ಕವನ ಸಂಕಲನ ‘ಬಾನುಲಿ'(1960) ಪ್ರಕಟವಾಯಿತು. ನವ್ಯ ಮಾರ್ಗದಲ್ಲಿ ಕಾವ್ಯ ಕೃಷಿ ಆರಂಭಿಸಿದ ಅವರು ಕರ್ನಾಟಕ ವಿಶ್ವವಿದ್ಯಾನಿಲಯದ ಇಂಗ್ಲಿಷ್ ಸ್ನಾತಕೋತ್ತರ (1962) ಪದವೀಧರರು.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತಿಮತ್ತೂರು ಎಂಬ ಗ್ರಾಮದವರಾದ ಚಂಪಾ 1939ರ ಜೂನ್‌ 18ರಂದು ಜನಿಸಿದರು. ತಂದೆ ಬಸವರಾಜ ಹಿರೇಗೌಡ, ತಾಯಿ ಮುರಿಗೆವ್ವ. ಚಂಪಾ ಹುಟ್ಟು ಹೋರಾಟಗಾರ ಮನೋಭಾವದವರು. ಕನ್ನಡನಾಡಿನ ಸಾಹಿತ್ಯಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಭಾಷಾ ಚಳವಳಿಗಳಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದವರು.

ಇದಲ್ಲದೆ ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿ ವೇತನ ಪಡೆದು ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾನಿಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮ ಪಡೆದರು. ಶಿಕ್ಷಣದ ಪ್ರತಿ ಹಂತದಲ್ಲಿಯೂ ಆಗ್ರ ಶ್ರೇಯಾಂಕ ಗಳಿಸಿದ ಕೀರ್ತಿ ಅವರದ್ದಾಗಿತ್ತು.

ಎಚ್.ಡಿ.ಕುಮಾರಸ್ವಾಮಿ ಸಂತಾಪ

ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ.

ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ.

Leave a Reply

Your email address will not be published. Required fields are marked *