ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ.
ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ.
ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಈ ನಡುವೆ ಶಾಲಾ ಕಾಲೇಜು, ಇಂಜಿನಿಯರಿಂಗ್ ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.
ಅಲ್ಲದೇ ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ “ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ.” ಎಂದು ಉಲ್ಲೇಖಿಸಿದ್ದಾರೆ.
ಸಿಎಂ ಸೂಚನೆಯಂತೆ ನಾಳೆಯಿಂದ ಮೂರು ದಿನಗಳವರೆಗೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಲಿದೆ.
ಹೈಕೋರ್ಟ್ ಕೂಡ ಹಿಜಾಬ್ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದು, ತೀರ್ಪು ಬಂದ ಬಳಿಕವಷ್ಟೇ ಮತ್ತೆ ಶಾಲಾ ಕಾಲೇಜು ಪುನರಾರಂಭವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
👇👇👇 ಜಾಹಿರಾತು 👇👇👇👇