ಗಾನ ಕೋಗಿಲೆ ಭಾರತ ರತ್ನ ಲತಾ ಮಂಗೇಶ್ಕರ್ ಭಾನುವಾರ ಮುಂಜಾನೆ 8.12ರ ಸುಮಾರಿಗೆ ಇಹಲೋಕ ತ್ಯಜಿಸಿದ್ದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು.
ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಅವರು ನಮ್ಮನ್ನಗಲಿದ್ದಾರೆ ಎಂದು ಅವರ ಆರೋಗ್ಯದ ಉಸ್ತುವಾರಿ ಹೊತ್ತಿದ್ದ ಡಾ.ಪ್ರತಿತ್ ಸಮ್ದಾನಿ ತಿಳಿಸಿದರು.
ಲತಾ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ದೇಶದಲ್ಲಿ ಎರಡು ದಿನಗಳ ಕಾಲ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದ್ದು, ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ. ಸರ್ಕಾರಿ ಗೌರವಗಳೊಂದಿಗೆ ಅವರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿಲಾಗಿದೆ.