ನಾನು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇರಿಸಿಲ್ಲ. ಆದರೆ ಸಚಿವ ಸ್ಥಾನವನ್ನು ಪಕ್ಷ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.
ಇಲ್ಲಿನ ತಹಶೀಲ್ದಾರ್ ಕಚೇರಿ ಸಮುಚ್ಛಯವನ್ನು ಮಂಗಳವಾರ ಪರಿಶೀಲನೆ ನಡೆಸಿ ಪತ್ರಕರ್ತರ ಜೊತೆ ನಡೆಸಿ ಮಾತನಾಡಿದ ಅವರು, ಅಂತಿಮವಾಗಿ ನಾನು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದರು.
ಜಿಲ್ಲೆಯಲ್ಲಿ ಆರಗ ಜ್ಞಾನೇಂದ್ರ ಮತ್ತು ಕೆ.ಎಸ್.ಈಶ್ವರಪ್ಪರಂತಹ ಇಬ್ಬರು ದಕ್ಷ ಸಚಿವರು ಇದ್ದರು. ಆದರೆ ರಾಜಕೀಯ ಮೇಲಾಟ ಮತ್ತು ವಿರೋಧಿಗಳ ಷಡ್ಯಂತ್ರದಿಂದ ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಈಗಾಗಲೇ ಈಡಿಗ ಕೋಟಾದಡಿ ಇಬ್ಬರು ಸಚಿವರು ಇದ್ದಾರೆ. ಅವರು ಘಟ್ಟದ ಕೆಳಗಿನವರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಸಂಬಂಧಪಟ್ಟಂತೆ ಇನ್ನೊಂದು ಸಚಿವ ಸ್ಥಾನ ಕೊಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ಇದು ಚುನಾವಣೆ ವರ್ಷವಾಗಿದ್ದು, ವರಿಷ್ಠರು ಅವಕಾಶ ನೀಡಿದರೆ ಸಮರ್ಥವಾಗಿ ಸಚಿವ ಸ್ಥಾನ ನಿಭಾಯಿಸುತ್ತೇನೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಶಿವಮೊಗ್ಗ ಪ್ರವಾಸದಲ್ಲಿದ್ದು ಈ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ನಿರ್ಧರಿಸಲಾಗಿದೆ. ಪ್ರಮುಖವಾಗಿ ಸಾಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಬಗರ್‌ಹುಕುಂ, ಅರಣ್ಯ ಹಕ್ಕು, ಕರೂರು ಭಾರಂಗಿ ಹೋಬಳಿಯ ನೆಟ್‌ವರ್ಕ್, ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗ್ಗೆ ಗಮನ ಸೆಳೆಯಲಾಗುತ್ತದೆ. ಸಾಗರ ನಗರಸಭೆಗೆ ವಿಶೇಷ ಅನುದಾನ ತರುವ ನಿಟ್ಟಿನಲ್ಲಿ ಸಹ ಮನವಿ ನೀಡಲಾಗುತ್ತಿದೆ ಎಂದು ಹೇಳಿದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್