ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯತಿ ಮಾಜಿ ಪ್ರಧಾನರು ಹಾಗೂ ಕಾಂಗ್ರೆಸ್ ಮುಖಂಡರಾದ ಪಿಯೂಸ್ ಡಿಸೋಜ ರವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಅನಾರೋಗ್ಯದಿಂದ ಬಳಲುತಿದ್ದ ಅವರನ್ನು ಎರಡು ದಿನಗಳ ಹಿಂದೆ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ 10.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅರಸಾಳು ಗ್ರಾಮ ಪಂಚಾಯತಿಯ ಮಾಜಿ ಪ್ರಧಾನರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾಗಿದ್ದರು.ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಬಂಗಾರಪ್ಪ, ಕಾಗೋಡು ತಿಮ್ಮಪ್ಪ ಸೇರಿದಂತೆ ಜಿಲ್ಲೆಯ ಪ್ರಮುಖ ರಾಜಕಾರಣಿಗಳೊಂದಿಗೆ ಒಡನಾಟವನ್ನು ಹೊಂದಿದ್ದರು.
1984ರಲ್ಲಿ ಅರಸಾಳು ಮಂಡಲ ಪಂಚಾಯಿತಿಯ ಪ್ರಧಾನರಾಗಿ ಆಯ್ಕೆಯಾಗಿದ್ದರು. ಮತ್ತು ಪಿಯೂಸ್ ಡಿಸೋಜರವರ ಸಹೋದರ ಥಾಮಸ್ ಡಿಸೋಜ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.
ಮೃತರು ಪತ್ನಿ ,ಓರ್ವ ಪುತ್ರ , ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ ಅರಸಾಳಿನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.