ಬಿಜೆಪಿ ಯುವ ಮುಖಂಡನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ನೆಟ್ಟಾರು(32) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿದ್ದರು.
ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಫಾರ್ಮ್ ಹೊಂದಿರುವ ಪ್ರವೀಣ್ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಫಾರ್ಮ್ ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಪ್ರವೀಣ್‌ರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿಮಧ್ಯೆ ಕೊನೆಯುಸಿರೆಳೆದರೆನ್ನಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಾರೆ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಬೆಳ್ಳಾರೆ ಪೇಟೆ ಸಹಿತ ಸುತ್ತಮುತ್ತ ಪೋಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ.
ಶಿವಮೊಗ್ಗದಲ್ಲಿ ನಗರ ಘಟಕದ ವತಿಯಿಂದ ಪ್ರತಿಭಟನೆ :
ಶಿವಮೊಗ್ಗ: ಮಂಗಳೂರಿನಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ನಗರ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಈ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಕಣ್ಣೀರಿಟ್ಟ ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ, ಬಿಜಿಪಿ ಮುಖಂಡ ಎಸ್.ಎನ್ ಚೆನ್ನಬಸಪ್ಪ ಕಣ್ಣೀರಿಟ್ಟಿದ್ದಾರೆ. ಹಿಂದೂ ಸಮಾಜವನ್ನು ಇಂದು ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ಹಾಗೂ ಬಜರಂಗದಳದ ಕಾರ್ಯಕರ್ತರ ಕೊಲೆ ಮಾಡಲಾಗುತ್ತಿದೆ.
ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಗೆ ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಆಯುಧಗಳನ್ನು ಕೊಡಿ ನಾವು ರಕ್ಷಣೆ ಮಾಡಿಕೊಳ್ಳುತ್ತೇವೆ. ಹಿಂದೂ ಸಮಾಜ ಕಾನೂನಿಗೆ ಗೌರವ ಕೊಟ್ಟು ಸುಮ್ಮನಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.