ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು.
ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿ.ಟಿ. ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿದ್ದರು.
ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆ ಯಾಗಿರುವ ಡಾ| ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ, ವೀರೇಂದ್ರ ಹೆಗ್ಗಡೆ ಎಂಬ ಹೆಸರಿನ ನಾನು, ರಾಜ್ಯಸಭೆಯ ಸದಸ್ಯನಾಗಿ ನಾಮನಿರ್ದೇಶನ ಹೊಂದಿದವನಾಗಿ, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಕೈಗೊಳ್ಳಲಿರುವ ಕಾರ್ಯಗಳನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಪ್ರಮಾಣ ಮಾಡಿದರು.
ವೀರೇಂದ್ರ ಹೆಗ್ಗಡೆಯವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅತ್ಯಂತ ಗೌರವಯುತವಾಗಿ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ಬರಮಾಡಿಕೊಂಡು, ಸನ್ಮಾನಿಸಿ ಅಭಿನಂದಿಸಿದರು.
ವೀರೇಂದ್ರ ಹೆಗ್ಗಡೆ ಕುರಿತು ಮಾತನಾಡಿದ ಜೋಶಿ, ನಮ್ಮ ಕರ್ನಾಟಕ ಹಾಗೂ ನಮ್ಮ ದೇಶದ ಹೆಮ್ಮೆಯಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದು ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದರು. ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್