ಶಿವಮೊಗ್ಗ : ಮಾಜಿ ಸಚಿವ ಈಶ್ವರಪ್ಪ ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಇವರ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಂದ ಕೋಮು ಗಲಭೆ ಆಗುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ತಮ್ಮ ಹೇಳಿಕೆಗಳ ಮೂಲಕ ಈಶ್ವರಪ್ಪ ಅವರೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ. ಇತಿಹಾಸದ ಅಧ್ಯಯನ ಇಲ್ಲದ ಯುವಕರು ಅವರು ಮಾತು ನಂಬುತ್ತಿದ್ದಾರೆ. ಶಿವಮೊಗ್ಗದಲ್ಲಿ ಪದೇ ಪದೆ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ. ಇದಕ್ಕೆ ಕಾರಣರಾರು ಎಂದು ಪ್ರಶ್ನಿಸಿದರು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಬ್ಬ ಗುತ್ತಿಗೆದಾರ ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರ ಕುರಿತು ಈಶ್ವರಪ್ಪ ಅವರು ಮಾತಾಡುತ್ತಿಲ್ಲ ಎಂದು ಸಂದರೇಶ್ ಆಕ್ರೋಶ ವ್ಯಕ್ತಪಡಿಸಿದರು.