ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.
ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು.
ಕಾರು, ಬೈಕು ಮುಖಾಮುಖಿ ಡಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೆ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ ಗಂಗಮ್ಮ ನಿಧನರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ಜ್ಯೋತಿ ಅಸುನೀಗಿದ್ದಾರೆ. ಮಲ್ಲಿಕಾರ್ಜುನ ಅವರ ಸ್ಥಿತಿ ಗಂಭೀರವಾಗಿದೆ.
ಮಲ್ಲಿಕಾರ್ಜನ, ಮಗಳು ಸೌಜನ್ಯ, ತಾಯಿ ಜ್ಯೋತಿ, ಅವರ ತಾಯಿ ಗಂಗಮ್ಮ ಬೈಕಿನಲ್ಲಿ ತೆರಳುತ್ತಿದ್ದರು. ಇವರು ಶಿರಾಳಕೊಪ್ಪದಿಂದ ಹಲುಗಿನಕೊಪ್ಪದಲ್ಲಿರುವ ಮನೆಗೆ ಹೋಗುತ್ತಿದ್ದರು. ಕಾರು ಹಿರೆಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತ್ತಿತ್ತು.
ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್