ರಿಪ್ಪನ್ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳಿದ್ದರೂ ಸಹ ಅವಕಾಶದ ಕೊರತೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಮಟ್ಟದ ಅಧಿಕಾರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಹೊಸನಗರ ತಾಲೂಕ್ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ವೀರಭದ್ರಪ್ಪ ಹೇಳಿದರು.
ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 59 ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಆಧುನಿಕ ತಂತ್ರಜ್ಞಾನದ ಶಿಕ್ಷಣದ ವ್ಯವಸ್ಥೆಯ ಅಡಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಡೆಯುತಿದ್ದು ನಗರ ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅದರಲ್ಲೂ ಸರ್ಕಾರಿ ಶಾಲೆಯ ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣ ನೀಡುವ ಸದುದ್ದೇಶದಿಂದ ಸರ್ಕಾರವು ಹಾಗೂ ಶಿಕ್ಷಕರುಗಳು ಹಗಲಿರುಳು ಶ್ರಮಿಸುತಿದ್ದಾರೆ.ಮಕ್ಕಳ ಪ್ರಗತಿಯಲ್ಲಿ ಪೋಷಕರ ಸಹಕಾರ ಅತ್ಯಂತ ಅಗತ್ಯವಾಗಿದ್ದು ಮಕ್ಕಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಆಗ ಮಾನಸಿಕವಾಗಿ ಹಾಗೂ ದೈಹಿಕವಾಗಿ ದೃಡತೆಯನ್ನು ಹೊಂದಬಹುದು ಎಂದು ಹೇಳಿದರು.
ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರುಗಳು ಉನ್ನತ ಶಿಕ್ಷಣವನ್ನು ಪಡೆದಿದ್ದು ತ್ಯಾಗ ಮನೋಭಾವದಿಂದ ಸೇವೆ ಸಲ್ಲಿಸುವುದರ ಮೂಲಕ ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಅಭ್ಯುದಯಕ್ಕಾಗಿ ಶ್ರಮಿಸುತಿದ್ದಾರೆ.ಈ ಶಾಲೆಯಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಭೋಜಪ್ಪರವರು ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವುದ ಸಂತಸ ಮತ್ತು ಹೆಮ್ಮೆಯ ಸಂಗತಿ ಎಂದರು.
ಇದೇ ಸಂಧರ್ಭದಲ್ಲಿ ನಿಕಟ ಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ವೀರಭದ್ರಪ್ಪ,ಕ್ಷೇತ್ರ ಶಿಕ್ಷಣಾ ಹೆಚ್ ಆರ್ ಕೃಷ್ಣಮೂರ್ತಿ, ದುಗ್ಗಪ್ಪ ಜಿ ,ಹರೀಶ್ ಪಿ , ದೀಪಿಕಾ ,ಮಮತಾ ,ರೂಪಾ , ನಾಗರತ್ನ , ಕೃತಿ ಹಾಗೂ ಲೋಕೇಶ್ ರವರನ್ನು ಶಾಲೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಶಾಲೆಯಲ್ಲಿ ವಾರ್ಷಿಕೋತ್ಸವ ಅಂಗವಾಗಿ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ನಂತರ ನಡೆದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶೇಷವಾಗಿ ಯಕ್ಷಗಾನ,ಡೊಳ್ಳುಕುಣಿತ ,ಜಾನಪದ ನೃತ್ಯ ಹಾಗೂ ಕಿರುನಾಟಕಗಳು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದವು.
ಈ ಸಂಧರ್ಭದಲ್ಲಿ ಲೀಲಾವತಿ ,ನಾಗರತ್ನ , ಎಂ ರಂಗನಾಥ , ನಾಗರಾಜ್ ಎಸ್ ಪಿ ,ಶಿವಪ್ಪ ಹೆಚ್ ಸಿ ,ಮಹೇಶ್ ಹೆಚ್ ಟಿ ,ಗಣಪತಿ ಕೆ ವಿ ,ಪ್ರಭಾವತಿ ಲೋಕೇಶ್ ಹಾಗೂ ಇನ್ನಿತರರಿದ್ದರು.
ಕಾರ್ಯಕ್ರಮವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಹಾಗೂ ಶಾಲೆಯ ಶಿಕ್ಷಕ ಭೋಜಪ್ಪ ಕಾರ್ಯಕ್ರಮವನ್ನು ನಿರೂಪಿಸಿದರು.
 
                         
                         
                         
                         
                         
                         
                         
                         
                         
                        

