ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಮಾಡಿದಂತ ಊಟವನ್ನು ಸೇವಿಸಿದಂತ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸಾಗರದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೋಟೆಕೊಪ್ಪ ಸರ್ಕಾರಿ ಶಾಲೆಯಲ್ಲಿ ಗುರುವಾರ ಮಧ್ಯಾಹ್ನದ ಬಿಸಿಯೂಟವನ್ನು ಮಕ್ಕಳು ಸೇವಿಸಿದ್ದಾರೆ.
ಈ ಬಳಿಕ ಮಕ್ಕಳಲ್ಲಿ ವಾಂತಿ, ಬೇಧಿ, ಜ್ವರ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಾಗರದ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ನಿನ್ನೆಯ ಬಳಿಕ ಇಂದು ಕೂಡ ಕೆಲ ಮಕ್ಕಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡ ಕಾರಣ, ಮತ್ತಷ್ಟು ಮಕ್ಕಳನ್ನು 25 ಕಿಲೋ ಮೀಟರ್ ದೂರದಲ್ಲಿನ ಸಾಗರದ ತಾಲೂಕು ಆಸ್ಪತ್ರೆಗೆ ಕರೆತಂದು ಪೋಷಕರು ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಈವರೆಗೆ 15ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಸೇರಿಸಿದ ಕಾರಣ ಅಸ್ವಸ್ಥಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.
ಈ ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಿದಂತ ಅಧಿಕಾರಿಗಳು, ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.