ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದಲ್ಲಿ 16 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು 6 ತಿಂಗಳು ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ.ಹೀಗೇ ದಿನ ಕಳೆದರೆ ಹೊಸ ಕಟ್ಟಡ ಶೀಥಿಲಾವಸ್ಥೆ ತಲುಪುದರಲ್ಲಿ ಅನುಮಾನ ಇಲ್ಲ ಎಂದು ಯಡಗುಡ್ಡೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಅಂಗನವಾಡಿ ಕೇಂದ್ರದ ಮಕ್ಕಳು ಅಂಗನವಾಡಿ ಶಿಕ್ಷಕಿಯ ಮನೆಯಲ್ಲಿ ಕಲಿಕೆಯಲ್ಲಿ ತೊಡಗಿದ್ದಾರೆ.ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿರುವ ಈ ಅಂಗನವಾಡಿ ಉದ್ಘಾಟನೆಯ ಭಾಗ್ಯ ದೊರೆಯದೆ ಇರುವುದರಿಂದ ಇದರ ಸುತ್ತಲೂ ಗಿಡಗಂಟಿಗಳು ಬೆಳೆದು ಶಿಥಿಲಾವಸ್ಥೆಗೆ ತಲುಪಿದಂತೆ ಆಗಿತ್ತು.ಕೂಡಲೇ ಸ್ಥಳೀಯ ಗ್ರಾಪಂ ಸದಸ್ಯರ ಅನುದಾನದಲ್ಲಿ ಅಂಗನವಾಡಿ ಸುತ್ತಮುತ್ತ ಸ್ವಚ್ಚಗೊಳಿಸಲಾಗಿದೆ.
ಇನ್ನೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕಟ್ಟಡದ ಉದ್ಘಾಟನೆಗೆ ಮುಂದಾಗದೇ ಇದ್ದಲ್ಲಿ ಸರ್ಕಾರದ ಲಕ್ಷಾಂತರ ರೂ ಹಣವನ್ನು ನೀರಲ್ಲಿ ಹೋಮ ಮಾಡಿದಂತಾಗುವುದು ಖಚಿತ ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತಿದ್ದಾರೆ.
ಶೀಘ್ರ ಉದ್ಘಾಟಿಸಿ:
ಕಾಮಾಗಾರಿ ಮುಗಿದು ಆರು ತಿಂಗಳು ಕಳೆದಿವೆ. ಕಟ್ಟಡ ಉದ್ಘಾಟಿಸಿ ಮಕ್ಕಳಿಗೆ ಅನುಕೂಲ ಕಲ್ಪಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರೂ ಅಂಗನವಾಡಿ ಕೇಂದ್ರ ತೆರೆದಿಲ್ಲ. ಯಾವ ಕಾರಣಕ್ಕಾಗಿ ಉದ್ಘಾಟನೆ ಮುಂದೂಡಲಾಗುತ್ತಿದೆ ಎಂಬುದೂ ತಿಳಿಯುತ್ತಿಲ್ಲ,ಅಧಿಕಾರಿಗಳ ನಿರ್ಲಕ್ಷ್ಯ ಅಥವಾ ರಾಜಕೀಯ ಹಿತಾಸಕ್ತಿಯಿಂದ ಅಂಗನವಾಡಿ ಕೇಂದ್ರ ಉದ್ಘಾಟಿಸದೆ ಮಕ್ಕಳ ಭವಿಷ್ಯವನ್ನು ಹಾಳು ಮಾಡುವುದು ಸರಿಯಲ್ಲ. ₹16 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡವನ್ನು ಉಪಯೋಗಿಸದೇ ಹಾಳು ಮಾಡುವುದು ಎಷ್ಟು ಸರಿ ಎಂದು ಹೆದ್ದಾರಿಪುರ ಗ್ರಾಪಂ ಸದಸ್ಯ ಯಡಗುಡ್ಡೆ ಷಣ್ಮುಖ ಆಕ್ರೋಶ ವ್ಯಕ್ತಪಡಿಸಿದರು.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ನೂತನ ಅಂಗನವಾಡಿಯನ್ನು ಉಧ್ಘಾಟಿಸಿ ಮಕ್ಕಳ ಕಲಿಕೆಗೆ ಅವಕಾಶ ಮಾಡಿಕೊಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯೆ ವಿನಂತಿ ರಾಘವೇಂದ್ರ, ಪೋಷಕರಾದ ನಾಗರಾಜ್ ಯಡಗುಡ್ಡೆ ,ಯದುರಾಜ್ ಕೊಳವಳ್ಳಿ ಸೇರಿದಂತೆ ಇನ್ನಿತರರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್