ಅಲ್ಲಾಹು ಮತ್ತು ಆಜಾನ್ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವಹೇಳನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ SDPI ಸಂಘಟನೆ ಕಾರ್ಯಕರ್ತರು, ಮಂಗಳೂರಿನ ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಈಶ್ವರಪ್ಪ ಅವರು ಆಜಾನ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮುದ್ವೇಷದ ಉದ್ದೇಶದಿಂದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.
ಶಾಸಕ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳಬೇಕು. ಶಾಸಕ ಸ್ಥಾನಕ್ಕೆ ಅವರಿಂದ ರಾಜೀನಾಮೆ ಪಡೆಯಬೇಕು. ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು SDPI ಕಾರ್ಯಕರ್ತರು ಒತ್ತಾಯಿಸಿದರು.
ಎಸ್‌ಡಿಪಿಐ ಸಂಘಟನೆ ಜಿಲ್ಲಾಧ್ಯಕ್ಷ ಇಮ್ರಾನ್, ರಾಜ್ಯ ಸಮಿತಿ ಸದಸ್ಯ ಸಲೀಂಖಾನ್, ಜಿಲ್ಲಾ ಕಾರ್ಯದರ್ಶಿ ಖಲೀಂ, ಜಿಲ್ಲಾ ಸಮಿತಿ ಸದಸ್ಯರಾದ ಫೈರೋಜ್, ಜೀಲಾನ್, ಇಸಾಕ್, ರಹೀಂ ಮತ್ತಿತರು ಇದ್ದರು.