ಈ ತಿಂಗಳ ಅಂತ್ಯದಲ್ಲಿ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಆರು ಕೋಟಿ ರೂ. ವೆಚ್ಚದ ಮೂರು ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದರು.
ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ ದೆಹಲಿಯಲ್ಲಿ ಮಾತುಕತೆ ನಡೆಯುತ್ತಿದೆ. ನೀತಿ ಸಂಹಿತೆ ಜಾರಿಗು ಮುನ್ನ ವಿಮಾನ ಹಾರಾಟ ಆರಂಭವಾಗಬೇಕು ಎಂಬ ಒತ್ತಾಸೆ ಇತ್ತು. ಅದರಂತೆ ಇನ್ನೊಂದು ವಾರದೊಳಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಶುರುವಾಗುವ ಸಂಭವವಿದೆ ಎಂದು ತಿಳಿಸಿದರು.
ಪ್ರತಿ ಟಿಕೆಟ್ ಗೆ ₹500 ಅನುದಾನ
ಪ್ರತಿ ಟಿಕೆಟ್ ಗೆ ರಾಜ್ಯ ಸರ್ಕಾರ ೫೦೦ ರೂ. ಅನುದಾನವನ್ನು ಇಂಡಿಗೋ ಏರ್ ಲೈನ್ಸ್ ಗೆ ನೀಡುತ್ತಿದ್ದು, ಬೆಂಗಳೂರು -ಶಿವಮೊಗ್ಗ ಹಾರಾಟಕ್ಕೆ ಇಂಡಿಗೋ ವಿಮಾನಯಾನ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು.
ಮಾ.25 ರಂದು ರಾಜ್ಯಕ್ಕೆ ಆಗಮಿಸುವ ಪ್ರಧಾನಿ ಮೋದಿ ದಾವಣಗೆರೆ ಕಾರ್ಯಕ್ರಮ ಮುಗಿಸಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಇಲ್ಲಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಇದು ವಿಮಾನ ನಿಲ್ದಾಣದ ಪ್ರಾಮುಖ್ಯತೆ ಸೂಚಿಸುತ್ತದೆ ಎಂದು ತಿಳಿಸಿದರು.
ಶಾಸಕರಾದ ಕೆ.ಎಸ್. ಈಶ್ವರಪ್ಪ, ಡಿ.ಎಸ್. ಅರುಣ್, ಸೂಡಾ ಅಧ್ಯಕ್ಷ ನಾಗರಾಜ್, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಕೆ.ಇ. ಕಾಂತೇಶ್, ಶಿವರಾಜ್, ಜ್ಞಾನೇಶ್ವರ್, ರಾಮಣ್ಣ, ಹೃಷಿಕೇಶ್ ಪೈ. ಇ. ವಿಶ್ವಾಸ್, ಅಣ್ಣಪ್ಪ ಉಪಸ್ಥಿತರಿದ್ದರು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್