ಶಿವಮೊಗ್ಗ: ಕಿಮ್ಮನೆ ರತ್ನಾಕರ್ ಅವರಿಗೆ ಚುನಾವಣೆಗೆ ಟಿಕೆಟ್ ನೀಡುವುದು ಮತ್ತು ಆರ್.ಎಂ.ಮಂಜುನಾಥಗೌಡ ಅವರನ್ನು ವಿಧಾನ ಪರಿಷತ್ ಗೆ ಕಳುಹಿಸುವ ಭರವಸೆಯನ್ನು ಕೆಪಿಸಿಸಿ ನೀಡಿದೆ ಎಂದು ತಿಳಿದುಬಂದಿದೆ.
ತೀರ್ಥಹಳ್ಳಿ ವಿದಾನಸಭಾ ಕ್ಷೇತ್ರದ ಉಮೇದರುವಾರಿಕೆ ಸಂಬಂಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಮಧ್ಯೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.
ಕಾಂಗ್ರೆಸ್ ಪಕ್ಷದ ಟಿಕೆಟ್‌ಗಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರ ನಡುವೆ ಪ್ರಬಲ ಪೈಪೋಟಿ ಇದ್ದ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಸಭೆ ಕರೆದಿದ್ದರು.
ಕಿಮ್ಮನೆ ರತ್ನಾಕರ್ ಮೊದಲ ರಿಯಾಕ್ಷನ್
ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಿಮ್ಮನೆ ರತ್ನಾಕರ್, ‘ಇಬ್ಬರು ಒಟ್ಟಾಗಿ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಬರಲಿದೆ.
ಆದ್ದರಿಂದ ಇಬ್ಬರು ಒಟ್ಟಾಗಿ ಕೆಲಸ ಮಾಡುವುದಾಗಿ ಒಪ್ಪಿಕೊಂಡಿದ್ದೇವೆ. ಟಿಕೆಟ್ ವಿಚಾರ, ಪಕ್ಷದ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಬಿಜೆಪಿಯನ್ನು ಸೋಲಿಸಲು ಎಲ್ಲಾ ಪ್ರಯತ್ನ ಮಾಡುತ್ತೇವೆ’ ಎಂದು ತಿಳಿಸಿದರು.