ರಿಪ್ಪನ್‌ಪೇಟೆ : ಕಳೆದ ಏಳು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಕೃಷಿಕ ವೀರಪ್ಪ(62)
ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಕಳೆದ ಏಳು ದಿನಗಳಿಂದ ಕಾಣೆಯಾಗಿದ್ದ ವೀರಪ್ಪ ರವರನ್ನು ಕುಟುಂಬಸ್ಥರು ಎಲಾ ಕಡೆ ಹುಡುಕಾಡಿದ್ದಾರೆ ನಂತರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕೂಡಾ ದಾಖಲಿಸಿದ್ದರು.
ಇಂದು ವೀರಪ್ಪ ರವರ ಮನೆ ಹಿಂಭಾಗ ದಟ್ಟ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.
ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು ಸಾವಿಗೆ ನಿಖರವಾದ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ.
ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್