BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ
ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ದೀಪಾವಳಿಗೆ ಮುನ್ನವೇ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಮತ್ತು ಬಿಎಸ್‌ವೈ ಕುಟುಂಬಕ್ಕೆ ವಿಶೇಷ ಕೊಡುಗೆಯನ್ನು ನೀಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಇದರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷರು ಯಾರಾಗುತ್ತಾರೆ ಎಂಬ ಬಹುಕಾಲದ ಕಾತರಕ್ಕೆ ತೆರೆ ಬಿದ್ದಿದೆ. ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷರಾಗಿದ್ದು, ಅವರ ಅಧಿಕಾರಾವಧಿ ಒಂದು ವರ್ಷದ ಹಿಂದೆಯೇ ಮುಕ್ತಾಯವಾಗಿದೆ.
ಇದೀಗ ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಹೈಕಮಾಂಡ್ ದೊಡ್ಡದೊಂದು ನಿರ್ಧಾರವವನ್ನು ಮಾಡಿದೆ. ವಿಜಯೇಂದ್ರ ಅವರು ಕೂಡಾ ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾದ ಪಕ್ಷಕ್ಕೆ ಮರುಶಕ್ತಿ ನೀಡಲು ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆ ಇದೆ.
ಶಿಕಾರಿಪುರದಿಂದ ಆಯ್ಕೆಯಾಗಿದ್ದರು
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಹತ್ವದ ಕ್ಷೇತ್ರಗಳಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರವೂ ಒಂದಾಗಿತ್ತು. ಕಾರಣ, ನಾಲ್ಕೂವರೆ ದಶಕಗಳ ಕಾಲ ಶಿಕಾರಿಪುರ ಕ್ಷೇತ್ರವನ್ನಾಳಿದ ಮಾಜಿ ಸಿಎಂ ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪುತ್ರ ಬಿ.ವೈ ವಿಜಯೇಂದ್ರ ಅವರು ಇದೇ ಮೊದಲ ಬಾರಿಗೆ ಸ್ಪರ್ಧೆ ಮಾಡಿದ್ದರಿಂದ ಸಾಕಷ್ಟು ಕುತೂಹಲ ಮೂಡಿಸಿತ್ತು. ಬಿ.ವೈ. ವಿಜಯೇಂದ್ರ ಅವರು ಈ ಕ್ಷೇತ್ರದಿಂದ ಜಯ ಸಾಧಿಸಿದ್ದರು. ಈ ಮೂಲಕ ಬಿಜೆಪಿ ಪಾರುಪತ್ಯ ಈ ಕ್ಷೇತ್ರದಲ್ಲಿ ಮುಂದುವರಿದಿತ್ತು.
ಬಿ.ವೈ. ವಿಜಯೇಂದ್ರ ಈ ಬಾರಿ ಸ್ವತಃ ಅಖಾಡಕ್ಕೆ ಇಳಿದಿದ್ದರು. ಅಲ್ಲದೆ, ಭರ್ಜರಿ ಪ್ರಚಾರವನ್ನೂ ಮಾಡಿದ್ದರು.