ರಿಪ್ಪನ್‌ಪೇಟೆ : ಭಾರತದ ಸಂವಿಧಾನ ಪ್ರಜಾಪ್ರಭುತ್ವದ ತಾಯಿಬೇರು ಮತ್ತು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ತಿಳಿಸಿದರು.
ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿಡಾ.ಬಿ.ಆರ್. ಅಂಬೇಡ್ಕರ್ ಅವರು ಕೋಟ್ಯಂತರ ಭಾರತೀಯರನ್ನು ಒಂದು ವ್ಯವಸ್ಥೆಯಲ್ಲಿ ತರುವ ಮೂಲಕ ಅತ್ಯುತ್ತಮ ಪ್ರಜಾತಂತ್ರ ರೂಪಿಸಲು ಈ ಸಂವಿಧಾನವನ್ನು ಕಾಣಿಕೆಯಾಗಿ ನೀಡಿದ್ದಾರೆ. ನಮ್ಮ ಸಂವಿಧಾನದಲ್ಲಿ ಜಾತಿ, ಧರ್ಮ, ಭಾಷೆ, ಸಂಸ್ಕೃತಿ ಹಾಗೂ ಆರ್ಥಿಕ, ಸಾಮಾಜಿಕ, ರಾಜಕೀಯವನ್ನು ಗೌರವಿಸುವ ಜತೆಗೆ ಅನ್ಯರಿಗೆ ನೋವಾಗದಂತೆ ಸರ್ವರಿಗೂ ಧರ್ಮ, ಜಾತಿ ಆಚಾರ ವಿಚಾರಗಳನ್ನು ಆಚರಣೆ ಮಾಡಲು ಭಾರತದ ಸಾರ್ವಭೌತ್ವವನ್ನು ಎತ್ತಿ ಹಿಡಿದಿದೆ ಎಂದರು.
ಇನ್ನು ಮುಂದಿನ ಯುವ ಜನರು ದೇಶದ ಭವಿಷ್ಯದ ಭವ್ಯ ನಾಗರೀಕರಾಗಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿರಿಯರು ತನು, ಮನ, ಧನವನ್ನು ಲೆಕ್ಕಿಸದೇ ತ್ಯಾಗ ಮಾಡಿ ಹುತಾತ್ಮರಾಗಿದ್ದು ಅವರಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ಪ್ರೇಮಿಯಾಗಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥವನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.
ಈ ಸಂಧರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನರೇಂದ್ರ , ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಪಂ ಸದಸ್ಯರು ,ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇನ್ನಿತರರಿದ್ದರು.