5,8 ಮತ್ತು 9ನೇ ತರಗತಿಗಳಿಗೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ನ್ಯಾಯಮೂರ್ತಿಗಳಾದ ಬೆಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ ತಡೆ ನೀಡಿದೆ.
5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು.
ಇದನ್ನು ಪ್ರಶ್ನಿಸಿದ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಸಿತ್ತು. ಅದರಂತೆ, ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ವಾದ ಪ್ರತಿವಾದ ಆಲಿಸಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರೂಪ್ಸಾ ಮತ್ತು ಅವರ್ ಸ್ಕೂಲ್ಸ್ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ ಈಗಾಗಲೇ ನಡೆಯುತ್ತಿರುವ ಪರೀಕ್ಷೆ ಮುಂದೂಡಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿಬಿ ಕಾವೇರಿ ಆದೇಶ ಹೊರಡಿಸಿದ್ದಾರೆ.
ಮುಂದೇನು..!!??
ಸದ್ಯದ ಸೂಚನೆ ಪ್ರಕಾರ, ಈಗ ನಡೆಯುತ್ತಿರುವ ಪರೀಕ್ಷೆಯನ್ನು ಮುಂದೂಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ಮುಂದಿನ ಆದೇಶದ ವರೆಗೆ ಪರೀಕ್ಷೆಗಳನ್ನು ಮುಂದೂಡುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ.
ರಾಜ್ಯ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ ಮಧ್ಯಂತರ ಆದೇಶದ ಬಗ್ಗೆ ತ್ವರಿತ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಹೈಕೋರ್ಟ್‌ಗೆ ಸೂಚಿಸಿದೆ.
ಹೈಕೋರ್ಟ್ ವಿಚಾರಣೆಯ ವೇಳೆ ಹೈಕೋರ್ಟ್ ಸ್ವಂತ ವಿವೇಚನೆಯನ್ನು ಬಳಸಲಿ ಮತ್ತು ಸುಪ್ರೀಂಕೋರ್ಟ್‌ನ ಅಭಿಪ್ರಾಯಗಳಿಂದ ಪ್ರಭಾವಿತವಾಗದಿರಲಿ ಎಂದು ಹೇಳಿದೆ.
ಅಂದರೆ ಹೈಕೋರ್ಟ್‌ನ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿ ತನ್ನ ತೀರ್ಪನ್ನು ನೀಡಬಹುದಾಗಿದೆ. ಮತ್ತು ಇದು ಅಂತಿಮವಾಗಿರುವ ಸಾಧ್ಯತೆ ಇದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್