ಗೀತಾ ಶಿವರಾಜ್ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಚುನಾವಣೆ ಸಿದ್ಧತೆಗಾಗಿ ಬುಧವಾರ ಜಿಲ್ಲೆಗೆ ಬಂದರು.
ಭದ್ರಾವತಿ ಸಮೀಪದ ಬಾರಂದೂರು ಗ್ರಾಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಎದುರುಗೊಂಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಗೀತಾ ಅವರನ್ನು ಸ್ವಾಗತಿಸಿದರು.
ಅಲ್ಲಿಂದ ಶಿವಮೊಗ್ಗಕ್ಕೆ ಮೆರವಣಿಗೆಯಲ್ಲಿ ಕರೆತಂದರು.
ಕಾರ್ಯಕರ್ತರ ಜೈಕಾರದ ನಡುವೆ ತೆರೆದ ವಾಹನದಲ್ಲಿ ಗೀತಾ ಹಾಗೂ ಅವರ ಪತಿ, ನಟ ಶಿವರಾಜಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಿಮ್ಮನೆ ರತ್ನಾಕರ ಸಾಗಿಬಂದರು.
ಶಿವಮೊಗ್ಗದ ಎಂಆರ್ ಎಸ್ ವೃತ್ತದಿಂದ ಆರಂಭವಾದ ಮೆರವಣಿಗೆ ಹೊಳೆ ಬಸ್ ನಿಲ್ದಾಣದ ಮೂಲಕ ಬೆಕ್ಕಿನಕಲ್ಮಠದ ಬಳಿಗೆ ಬಂದಾಗ ಅಲ್ಲಿ ಕಾಂಗ್ರೆಸ್ ಮುಖಂಡರಾದ ಎಚ್.ಸಿ.ಯೋಗೀಶ ನೇತೃತ್ವದಲ್ಲಿ ಕ್ರೇನ್ ಮೂಲಕ ದೊಡ್ಡ ಮೋಸಂಬಿ ಹಾರ ಹಾಕಿ, ಬಲೂನು ಹಾರಿಸಿ ಗೀತಾ ಅವರಿಗೆ ಸ್ವಾಗತ ಕೋರಲಾಯಿತು. ಕಾರ್ಯಕರ್ತರು ಬೈಕ್ ನಲ್ಲಿ ಮೆರವಣಿಗೆಯಲ್ಲಿ ಸಾಗಿ ಬಂದರು.
ಕಾಂಗ್ರೆಸ್ ಟಿಕೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಗೀತಾ ಶಿವರಾಜ್ಕುಮಾರ್ ಬಂದಿದ್ದು, ಪಕ್ಷದಿಂದ ಭರ್ಜರಿ ಸ್ವಾಗತ ದೊರೆಯಿತು. ಇಲ್ಲಿನ ಗೋಪಾಲಗೌಡ ಬಡಾವಣೆಯ ಲಗಾನ್ ಕಲ್ಯಾಣ ಮಂದಿರದಲ್ಲಿ ಕಾರ್ಯಕರ್ತರ ಸಭೆ ಆರಂಭವಾಗಿದ್ದು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ ಪಕ್ಷದ ಪರವಾಗಿ ಗೀತಾ ಅವರನ್ನು ಸ್ವಾಗತಿಸಿದರು. ಮಹಿಳೆಯರು ಸೇರಿದಂತೆ ಭಾರೀ ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಬಿರು ಬಿಸಿಲಿನಿಂದ ಬಸವಳಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್