Shivamogga | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
ಕೊಲೆ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳಿಗೆ ತಲಾ 50 ಸಾವಿರ ರೂ. ದಂಡ ಮತ್ತು ಜೀವಾವಧಿ ಶಿಕ್ಷೆ ನೀಡಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2021 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ವಾದಿ ಎ ಹುದಾ ಬಡಾವಣೆಯಲ್ಲಿ ಮೊಹಮದ್ ಜೈದಾನ್ ಎಂಬಾತನನ್ನು ಕೊಲೆ ಮಾಡಲಾಗಿತ್ತು.
ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಪಿ. ಓ. ಪುಷ್ಪಾ, ಸರ್ಕಾರಿ ಅಭಿಯೋಜಕರು, ಪ್ರಕರಣದ ವಾದ ಮಂಡಿಸಿದ್ದು, ಘನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಪ್ರಕರಣದ ಆರೋಪಿಗಳಾದ 1) ಮಹಮ್ಮದ್ ನಖಿ ಅಲಿ @ ನಖಿ @ ಮಣಿ, 21 ವರ್ಷ, ಲಕ್ಷರ್ ಮೊಹಲ್ಲಾ, ಶಿವಮೊಗ್ಗ ಟೌನ್, 2) ಮಹಮ್ಮದ್ ಅಬು ಸ್ವಲೇಹ @ ಅಬು @ ಸೋನು, 21 ವರ್ಷ, ಇಲಿಯಾಸ್ ನಗರ, ಶಿವಮೊಗ್ಗ ಟೌನ್ ಇವರುಗಳ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ ಪಲ್ಲವಿ ಬಿ.ಆರ್ ರವರು ನಿನ್ನೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ರೂ 50,500/- ದಂಡ ವಿಧಿಸಿ ತೀರ್ಪು ನೀಡಿದ್ದಾರೆ
ಮೃತನ ತಂದೆ ಮತ್ತು ತಾಯಿ ಇಬ್ಬರಿಗೂ ದಂಡದ ಮೊತ್ತದಲ್ಲಿ ತಲಾ 40,000/- ರೂ. ಮತ್ತು ಸರ್ಕಾರದಿಂದ ಸೂಕ್ತ ಪರಿಹಾರ ನೀಡಲು ಆದೇಶಿಸಿದ್ದಾರೆ.
ಘಟನೆಯ ಹಿನ್ನಲೆ :
ಶಿವಮೊಗ್ಗ ಟೌನ್ ವಾದಿ-ಎ-ಹುದಾ ವಾಸಿ ಮಹಮ್ಮದ್ ಜೈದಾನ್ ಮತ್ತು ಶಿವಮೊಗ್ಗ ಟೌನ್ ಲಕ್ಷರ್ ಮೊಹಲ್ಲಾದ ವಾಸಿ ನಕೀ ಅಲಿ ಇಬ್ಬರ ನಡುವೆ ಯಾವುದೋ ವಿಚಾರವಾಗಿ ಹಿಂದೆ ಜಗಳವಾಗಿತ್ತು. ಇವರಿಬ್ಬರ ಜಗಳದಿಂದಾಗಿ ಜೈದಾನ್ ನ ತಂದೆ ನಜೀರ್ ಅಹಮದ್ ಅವರು ಬಾಪೂಜಿ ನಗರದಿಂದ ವಾದಿ ಎ ಹುದಾ ಬಡಾವಣೆಗೆ ಶಿಫ್ಟ್ ಆಗಿದ್ದರು.
ಆದರೂ ಬಿಡದ ಆರೋಪಿಗಳು 2021 ನೇ ಇಸವಿಯ ಅ.29 ರಂದು ರಾತ್ರಿ ಶಿವಮೊಗ್ಗ ಟೌನ್ ವಾದಿ-ಎ-ಹುದಾ ಹತ್ತಿರ ನಕೀ ಅಲಿ ಅವಿತು ಕುಳಿತು ಜೈದಾನ್ ಬರುವವರೆಗೂ ಕಾದು ನಂತರ ಮಹಮ್ಮದ್ ಅಬು ಸ್ವಲೇಹ ಜೊತೆ ಸೇರಿಕೊಂಡು ಮಹಮ್ಮದ್ ಜೈದಾನ್ ನ ಮೇಲೆ ಹರಿತವಾದ ಆಯುಧಗಳಿಂದ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿದ್ದರು.
ಈ ಬಗ್ಗೆ ಮೃತನ ತಂದೆ ನೀಡಿದ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ದೀಪಕ್ ಎಂ.ಎಸ್, ಪೊಲೀಸ್ ನಿರೀಕ್ಷಕರು, ತುಂಗಾನಗರ ಪೊಲೀಸ್ ಠಾಣೆ ರವರು ಪ್ರಕರಣದ ತನಿಖೆ ಪೂರೈಸಿ ಆರೋಪಿತರ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply