ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ
ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ ಪುತ್ರಿ, ನಟ ಶಿವರಾಜ್‌ಕುಮಾರ್ ಪತ್ನಿ ಹಾಗೂ ಸಚಿವ ಮಧು ಬಂಗಾರಪ್ಪ ಅವರ ಸಹೋದರಿ ಗೀತಾ ಶಿವರಾಜ್ ಕುಮಾರ್ ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಸೋಲನ್ನು ಅನುಭವಿಸಿದ್ದಾರೆ.
ಬಿಜೆಪಿಯಿಂದ ಸಿಡಿದೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಶೋಚನೀಯ ಸೋಲು ಅನುಭವಿಸಿದ್ದಾರೆ. ತಮ್ಮ ಮಗನಿಗೆ ಹಾವೇರಿ ಟಿಕೆಟ್ ಸಿಗದಿದ್ದರಿಂದ ಪಕ್ಷದ ಮುಖಂಡರ ವಿರುದ್ಧ ಆಕ್ರೋಶಗೊಂಡು ತಾವೇ ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಬಿಜೆಪಿಗೆ ಮಗ್ಗಲ ಮುಳ್ಳಾಗಿ ಈ ಚುನಾವಣೆಯಲ್ಲಿ ಕಾಡಿದರೂ ಬಿಜೆಪಿಗೆ ಹೆಚ್ಚಿನ ನಷ್ಟ ಆಗಲಿಲ್ಲ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್