ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ರಿಪ್ಪನ್ ಪೇಟೆ : ಪಟ್ಟಣದ ರೋಟರಿ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 13ರ ಶನಿವಾರ ಸಂಜೆ 5:00 ಗಂಟೆಗೆ ನೆರವೇರಲಿದೆ ಎಂದು ನೂತನ ಅಧ್ಯಕ್ಷ ರಾಮಚಂದ್ರ ಹೇಳಿದರು.
ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೇ ಪ್ರಪಂಚದಾದ್ಯಂತ ಪೋಲಿಯೋ ನಿರ್ಮೂಲನೆಗಾಗಿ ರೋಟರಿ ಸಂಸ್ಥೆ ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಕೈಜೋಡಿಸಿ ಅದರಲ್ಲಿ ಯಶಸ್ವಿಯಾಗಿದೆ. ಹಾಗೆಯೇ ಶಿಕ್ಷಣ ಹಾಗೂ ಕೃಷಿ ಕ್ಷೇತ್ರದಲ್ಲಿ ಸೇವೆಯನ್ನು ಮುಂದುವರಿಸುವುದರ ಸಲುವಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ . ಆ ಯೋಜನೆಗಳ ಅನ್ವಯ ಈ ವರ್ಷ ಪರಿಸರ, ಆರೋಗ್ಯ ಸುರಕ್ಷಾ, ಸಮುದಾಯಗಳ ಆರ್ಥಿಕ ಅಭಿವೃದ್ಧಿ, ಶುದ್ಧ ನೀರಿನ ಘಟಕ, ಪ್ರಾಥಮಿಕ ಶಿಕ್ಷಣ ಹಾಗೂ ಸಾಕ್ಷರತೆ, ಗರ್ಭಿಣಿ ಮಹಿಳೆಯರ ಆರೋಗ್ಯ ರಕ್ಷಣೆ ಮತ್ತು ಮಕ್ಕಳ ಸುರಕ್ಷತೆ ಯ ಕಾರ್ಯಕ್ರಮದ ಬಗ್ಗೆ ಆದ್ಯತೆಯನ್ನು ನೀಡಲಾಗಿದೆ ಎಂದರು.
ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿನ ಪ್ರೌಢಶಾಲೆಯ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಹಾಗೂ ರಿಪ್ಪನ್ ಪೇಟೆಯ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿವಿಧ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಮತ್ತು ರಿಪ್ಪನ್ ಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ವಿಭಾಗಗಳಲ್ಲಿ ಅಂತಿಮ ಪದವಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಶಿವಮೊಗ್ಗ ರೋಟರಿ ಸಂಸ್ಥೆಯ ಎಚ್ ಎಲ್ ರವಿ ನೆರವೇರಿಸಿಕೊಡಲಿದ್ದಾರೆ. ಈ ಸಮಾರಂಭದಲ್ಲಿ ರೋಟರಿ 31 82ರ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಪ್ರೊ. ಎಚ್.ಎಂ ಸುರೇಶ್, ಲೇಫ್ಟಿನೆಂಟ್ ಜೊನಲ್ ರಾಧಾಕೃಷ್ಣ ಜೆ, ರಿಪ್ಪನ್ ಪೇಟೆ ರೋಟರಿ ಕ್ಲಬ್ ನಿಕಟಪೂರ್ವ ಅಧ್ಯಕ್ಷ ದೇವದಾಸ್ ಆಚಾರ್ಯ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನೂತನ ಕಾರ್ಯದರ್ಶಿ ಸಬಾಸ್ಟಿನ್ ಮ್ಯಾಥ್ಯೂಸ್ ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ ಜೆ, ಆರ್ ಗಣೇಶ್. ಎಚ್. ಎ.,ರಾಧಾಕೃಷ್ಣ, ಸಾಜಿ ಜೇಕಬ್, ರವೀಂದ್ರ ಬಲ್ಲಾಳ್ ಇನ್ನಿತರರಿದ್ದರು