ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ
ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ
ಶಾಲಾ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ.
ಮೃತ ವಿದ್ಯಾರ್ಥಿಗಳನ್ನು ಸಮರ್ಥ್ ಅಮರೇಶ್ (07) ಹಾಗೂ ಶ್ರೀಕಾಂತ್ ಮಾರೇಶ್ (07) ಎಂದು ಗುರುತಿಸಲಾಗಿದ್ದು, ಇವರಿಬ್ಬರು ಲೊಯೋಲಾ ಶಾಲೆಯ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ.
ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಕಾಲು ತುಂಡಾಗಿದ್ದು, ಗಾಯಾಳುಗಳನ್ನು ರಿಮ್ಸ್ಗೆ ದಾಖಲಿಸಲಾಗಿದೆ.
ಶಾಲಾ ಮಕ್ಕಳನ್ನು ಕರೆದುಕೊಂಡು ಮಾನ್ವಿಯ ಲೊಯೋಲಾ ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ರಾಯಚೂರು ಕಡೆ ಹೊರಟ್ಟಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಶಾಲಾ ವಹನ ನಜ್ಜುಗುಜ್ಜಾಗಿದ್ದು, ಮೂವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ನಿತೀಶ್, ಮೃತರಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 3 ಲಕ್ಷ ರೂ. ಪರಿಹಾರವನ್ನು ಸರ್ಕಾರದ ವತಿಯಿಂದ ಘೋಷಿಸಲಾಗಿದೆ. ರಸ್ತೆ ಸಾರಿಗೆ ಸಂಸ್ಥೆಯಿಂದಲೂ ಪರಿಹಾರ ಕೊಡಿಸಲಾಗುವುದು. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಆಸ್ಪತ್ರೆಯತ್ತ ಮಕ್ಕಳ ಪೋಷಕರು ಆಗಮಿಸುತ್ತಿದ್ದು, ಐಸಿಯುನಲ್ಲಿ ಮಕ್ಕಳನ್ನ ತೋರಿಸುವಂತೆ ಪೋಷಕರು ಪಟ್ಟು ಹಿಡಿದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪೋಷಕರೊಂದಿಗೆ ವಾಗ್ವಾದ ಉಂಟಾಗಿದೆ. ಸದ್ಯ ರಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳು ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದ್ದು, ಚಿಕಿತ್ಸೆ ಸ್ಪಂದಿಸುತ್ತಿರುವ ಮಕ್ಕಳಿನ್ನು ವಾರ್ಡ್ಗಳಿಗೆ ಶಿಫ್ಟ್ ಮಾಡಲಾಗಿದ್ದು, ಕೆಲವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ.
ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ
ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಡಿಸಿ ಕೆ.ನಿತೇಶ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮ ಸಮೀಪ ನಡೆದಿದ್ದ ಅಪಘಾತ ಸಂಭವಿಸಿದೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗಾಯಗೊಂಡ ಮಕ್ಕಳ ಚಿಕಿತ್ಸೆಗೆ ತಲಾ 3 ಲಕ್ಷ ರೂ. ನೆರವು ನೀಡಲಾಗುತ್ತಿದೆ ಎಂದಿದ್ದಾರೆ.