ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಸಾಗರ : ನಮ್ಮ ಶಾಲೆ ನಮ್ಮ ಜವಾಬ್ದಾರಿ ಅತ್ಯಂತ ಪರಿಣಾಮಕಾರಿ ಹೆಜ್ಜೆಯಾಗಿದೆ. ಈ ಯೋಜನೆಯಡಿ 500 ರೂಪಾಯಿಯಿಂದ 6.50 ಕೋಟಿ ರೂ. ವರೆಗೆ ಶಾಲಾಭಿವೃದ್ಧಿಗೆ ದೇಣಿಗೆ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಆ.1ರ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅಕ್ಷರ ದಾಸೋಹ ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್‌ಜೀ ಫೌಂಡೇಶನ್‌ನಿಂದ ನೀಡಲಾದ ಅನುದಾನದಲ್ಲಿ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ-ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರ್ಕಾರಿ ಶಾಲೆಗಳ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಬಂದ ಮೇಲೆ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಹಳೆಯ ವಿದ್ಯಾರ್ಥಿಗಳ ಸಂಘದ 34,880 ವ್ಯಾಟ್ಸಪ್ ಗ್ರೂಪ್ ರಚಿಸಿ ತನ್ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದೇಣಿಗೆ ಸಂಗ್ರಹಿಸಲಾಗುತ್ತಿದೆ. ಅಜೀಂ ಪ್ರೇಮ್‌ಜೀ ನಮ್ಮ ಸರ್ಕಾರದ ಮೇಲೆ ಭರವಸೆ ಇರಿಸಿ 1,591 ಕೋಟಿ ರೂ. ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ ನೀಡಲು ಕೊಟ್ಟಿದ್ದಾರೆ. ಇಂತಹ ದಾನಿಗಳ ಸಂಖ್ಯೆ ಹೆಚ್ಚಾದಾಗ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಅತಿದೊಡ್ಡ ಇಲಾಖೆ ಶಿಕ್ಷಣ ಇಲಾಖೆಯಾಗಿದೆ. ಶೇ. 40ರಷ್ಟು ಸರ್ಕಾರಿ ನೌಕರರು ನಮ್ಮ ಇಲಾಖೆಯಲ್ಲಿದ್ದಾರೆ. ರಾಜ್ಯದ 74 ಸಾವಿರ ಶಾಲೆಗಳ ಪೈಕಿ 57 ಲಕ್ಷ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ವರ್ಷಕ್ಕೆ 30 ಕೋಟಿ ಮೊಟ್ಟೆ ಬೇಕಾಗುತ್ತದೆ. ರಾಜ್ಯದಲ್ಲಿ ವಿಪರೀತ ಮಳೆಯಿಂದಾಗಿ ಶಾಲಾ ಕೊಠಡಿಗಳು ಹಾಳಾಗಿದೆ. ಮುಂದಿನ ಒಂದು ವರ್ಷದಲ್ಲಿ ಕೊಠಡಿಗಳನ್ನು ರಿಪೇರಿ ಮಾಡಿ ಕೊಡಲಾಗುತ್ತದೆ. ಪೋಷಕರು ಮಕ್ಕಳನ್ನು ನಿರಂತರ ಶಾಲೆಗೆ ಕಳಿಸುವ ಮೂಲಕ ಅವರನ್ನು ವಿದ್ಯಾವಂತರನ್ನಾಗಿ ಮಾಡಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಅಜೀಂ ಪ್ರೇಮ್ ಜೀ ಅವರ ಶೈಕ್ಷಣಿಕ ಸೇವೆ ಎಲ್ಲರಿಗೂ ಪ್ರೇರಣೆಯಾಗಬೇಕು. ಶಿಕ್ಷಣದಲ್ಲಿ ಕ್ರಾಂತಿಯಾಗಬೇಕಾದರೆ ದೇಶದ ದೊಡ್ಡ ದೊಡ್ಡ ಕಂಪನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ಅದಾನಿ, ಅಂಬಾನಿಯಂತಹ ಶ್ರೀಮಂತರು ಸರ್ಕಾರಿ ಶಾಲೆ ಅಭಿವೃದ್ಧಿಗೆ ಕೈಜೋಡಿಸಿ ಎಂದು ಮನವಿ ಮಾಡಿದ ಅವರು, ಶಿಕ್ಷಣದಿಂದ ಮಾತ್ರ ಶಕ್ತಿ ಬರುತ್ತದೆ. ಸರ್ಕಾರಿ ಶಾಲೆಗಳ ಬಗ್ಗೆ ನಿರಾಸಕ್ತಿ ತೋರಿಸದೆ ಇಲ್ಲಿನ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಫಲಿತಾಂಶ ತರಬೇಕು ಎಂದರು.

ವೇದಿಕೆಯಲ್ಲಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೇಮಂತ್ ಎನ್., ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಯತೀಶ್ ಆರ್., ಶಿಕ್ಷಣ ಇಲಾಖೆಯ ಕೆ.ಆರ್.ಬಿಂಬಾ, ಡಿವೈಎಸ್‌ಪಿ ಗೋಪಾಲಕೃಷ್ಣ ಟಿ. ನಾಯಕ್, ತಾಲೂಕು ಪಂಚಾಯ್ತಿ ಇಓ ಗುರುಕೃಷ್ಣ ಶೆಣೈ, ಪೌರಾಯುಕ್ತ ಎಚ್.ಕೆ.ನಾಗಪ್ಪ, ಭೂಮೇಶ್ ಇನ್ನಿತರರು ಹಾಜರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಈ. ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಅನ್ಸರ್ ಆಲಿ ಬೇಗ್ ವಂದಿಸಿದರು. ಡಾ. ಅನ್ನಪೂರ್ಣ ನಿರೂಪಿಸಿದರು.

Leave a Reply

Your email address will not be published. Required fields are marked *