ವಾಲಿಬಾಲ್ ತರಬೇತಿ ನೀಡುತಿದ್ದ ಶಿಕ್ಷಕ ಹೃದಯಾಘಾತದಿಂದ ಕುಸಿದು ಬಿದ್ದು ಸಾವು



ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಅ.16ರ ಬುಧವಾರ ನಡೆದಿದೆ.
ಸಾಗರದ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಜಾನನ ಹಿರೇಮಠ (50) ನಿಧನ ಹೊಂದಿದವರು.ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಶಿಕ್ಷಕ ಗಜಾನನ ಅವರು ತಮ್ಮ ಕ್ರಿಯಾಶೀಲತೆಯಿಂದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆ, ಪೋಷಕರೊಂದಿಗೆ ಅತ್ಯುತ್ತಮ ಸಂಬಂಧ ಹೊಂದಿಕೊಂಡು ಜನಪ್ರಿಯರಾಗಿದ್ದರು. ಅವರು ಕಲಾ ಶಿಕ್ಷಕರಾಗಿ ಕೆಲಸಕ್ಕೆ ಸೇರಿದ್ದು, ಬಳಿಕ ಶಿಕ್ಷಣ ಸಂಸ್ಥೆಯ ಕೋ ಆರ್ಡಿನೇಟರ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.
ಕ್ರೀಡಾಸ್ಪರ್ಧೆಗಳಲ್ಲಿ ಪಾಲ್ಗೊಂಡ ಶಾಲೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದರು. ಅ.16ರ ಬುಧವಾರ ಗಜಾನನ ಅವರು ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ನಡೆಯಿತಾದರೂ ಮಾರ್ಗ ಮಧ್ಯದಲ್ಲಿ ಅವರು ಅಸುನೀಗಿದ್ದಾರೆ.