Headlines

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ

ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು ಹಾಗೂ ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು” ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಕ್ಕಿ ಜ್ವರ ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಗುರುದತ್ತ ಹೆಗಡೆ ಮಾತನಾಡಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸಿಇಓ ಹೇಮಂತ್ ಎನ್., ಡಿಹೆಚ್‌ಓ ಡಾ. ನಟರಾಜ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗುಡದಪ್ಪ ಕಸಬಿ, ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ, ಮೆಗ್ಗಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

ಗುರುದತ್ತ ಹೆಗಡೆ ಮಾತನಾಡಿ, ” ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಎನ್1 ವೈರಸ್‌ನಿಂದ ಹರಡುವ ರೋಗ. ಇದು ಟರ್ಕಿ, ಗಿನಿ ಕೋಳಿ, ಬಾತು ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಖಾಯಿಲೆ. ಇದೊಂದು ಸಾಂಕ್ರಾಮಿಕ ರೋಗವಾಗಿದ್ದು ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಮ್ಮೆ ರೋಗಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ” ಎಂದರು.

“ಜಿಲ್ಲೆಯಲ್ಲಿ ಈವರೆಗೆ ಹಕ್ಕಿ ಜ್ವರ ಪ್ರಕರಣ ಕಂಡು ಬಂದಿಲ್ಲ. ಆದರೂ ಹಕ್ಕಿ ಜ್ವರ ಕುರಿತು ಮುಂಜಾಗೃತೆ ವಹಿಸಬೇಕು. ಸಾಮಾನ್ಯವಾಗಿ ಹಕ್ಕಿ ಜ್ವರ ಹೆಚ್1ಎನ್1 ಜ್ವರದ ಲಕ್ಷಣಗಳಂತೆಯೇ ಇರುತ್ತದೆ. ಜ್ವರ ಮತ್ತು ಕೆಮ್ಮು, ಶೀತ, ತಲೆನೋವು, ಗಂಟಲು ಕೆರೆತ, ನೆಗಡಿ, ಸ್ನಾಯುಗಳಲ್ಲಿ ನೋವು, ಆಯಾಸ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ, ಬೇಧಿಯೂ ಆಗಬಹುದು ಮುಖ್ಯವಾಗಿ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತದೆ” ಎಂದು ಹೇಳಿದರು.

“ರೋಗ ಲಕ್ಷಣ ಕಂಡುಬಂದಲ್ಲಿ ತಕ್ಷಣದ ಸರ್ಕಾರಿ ಆಸ್ಪತ್ರೆ ಅಥವಾ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ಶಂಕಿತ ಹಕ್ಕಿಜ್ವರ ಪೀಡಿತ ಕೋಳಿಗಳು, ಹಕ್ಕಿಗಳು, ಬಾತುಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಶಂಕಿತ ಹಕ್ಕಿ ಜ್ವರ ಪೀಡಿತ ಫಾರಂಗಳಿಗೆ ಭೇಟಿ ನೀಡಬಾರದು” ಎಂದರು.

“ಒಂದು ವೇಳೆ ಹಕ್ಕಿಗಳ ಸಂಪರ್ಕಕ್ಕೆ ವ್ಯಕ್ತಿಗಳು ಬಂದಲ್ಲಿ ಕೈಕಾಲು ಮತ್ತು ಮುಖವನ್ನು ಚೆನ್ನಾಗಿ ತೊಳೆದುಕೊಂಡು ಬಟ್ಟೆ ಬದಲಾಯಿಸಬೇಕು. ಮುಂದಿನ ನಾಲ್ಕು ದಿನಗಳವರೆಗೆ ದೇಹದ ಉಷ್ಣಾಂಶದಲ್ಲಾಗುವ ಬದಲಾವಣೆಯನ್ನು ಗಮನಿಸಬೇಕು. ಒಂದು ವೇಳೆ ಜ್ವರ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು” ಎಂದು ತಿಳಿಸಿದರು.

ಕೋಳಿ ಮಾಂಸ ಸೇವನೆಯಿಂದ ಜ್ವರ ಬರಲ್ಲ: ಕೋಳಿ ಮಾಂಸ ಅಥವಾ ಮೊಟ್ಟೆಗಳನ್ನು ಸೇವಿಸುವುದರಿಂದ ಹಕ್ಕಿ ಜ್ವರ ಮನುಷ್ಯರಿಗೆ ಬರುವುದಿಲ್ಲ. ಆದರೆ ಸೋಂಕು ತಗುಲಿದ ಕೋಳಿಯ ಮಾಂಸವನ್ನು ಚೆನ್ನಾಗಿ ಬೇಯಿಸದೇ ಹಾಗೂ ಅವುಗಳ ಹಸಿ ಮೊಟ್ಟೆಯ ಸೇವನೆಯಿಂದ ರೋಗ ತಗಲುವ ಸಾಧ್ಯತೆಗಳಿರುತ್ತವೆ.

ಕೋಳಿ ಮಾಂಸ ಮತ್ತು ಮೊಟ್ಟೆಯನ್ನು 70 ಡಿಗ್ರಿ ಸೆಂಟಿಗ್ರೇಡ್‌ಗೂ ಅಧಿಕ ಉಷ್ಣಾಂಶದಲ್ಲಿ ಬೇಯಿಸಿದ ನಂತರವೇ ಸೇವಿಸಬೇಕು. ಅಡುಗೆಗಾಗಿ ಕೋಳಿ ಮಾಂಸ ಸಿದ್ದಪಡಿಸಿದ ನಂತರ ಕೈಗಳನ್ನು ನಂಜುನಾಶಕದಿಂದ ಸ್ವಚ್ಚವಾಗಿ ತೊಳೆದುಕೊಳ್ಳಬೇಕು. ಸೋಂಕಿತ ಹಸಿ ಮೊಟ್ಟೆಯನ್ನು ಸೇವಿಸಬಾರದು ಎಂದು ಜನರಿಗೆ ಮನವಿ ಮಾಡಲಾಗಿದೆ.

ಡಿಎಸ್‌ಓ ಡಾ. ನಾಗರಾಜ ನಾಯ್ಕ ಮಾತನಾಡಿ, “ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಹಾಗೂ ಮೊಟ್ಟೆಯನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ, ಸೋಂಕಿರುವ ಹಸಿ ಮೊಟ್ಟೆಗಳನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು ಮನುಷ್ಯರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಖಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭದಲ್ಲಿ ಗಾಳಿಯ ಮೂಲಕವೂ ಮನುಷ್ಯರಿಗೆ ಹರಡುತ್ತದೆ” ಎಂದರು.

“ಹಕ್ಕಿಜ್ವರ ಮುನ್ನೆಚ್ಚರಿಕೆಯಿಂದ ತಡೆಯಬಲ್ಲ ಖಾಯಿಲೆ. ಆದ್ದರಿಂದ ಖಾಯಿಲೆ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಮಾಹಿತಿ ಕೇಂದ್ರ ಅಥವಾ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿಯನ್ನು ನೀಡಬೇಕು. 65 ವರ್ಷ ದಾಟಿದ ಹಿರಿಯರು, ಗರ್ಭಿಣಿಯರು, 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಇತರೆ ಕೋಮಾರ್ಬಿಡಿಟಿ ಉಳ್ಳ ವ್ಯಕ್ತಿಗಳು ಆದಷ್ಟು ಎಚ್ಚರಿಕೆಯಿಂದ ಇರಬೇಕು. ಜಿಲ್ಲೆಯಲ್ಲಿ ಕೋಳಿಜ್ವರಕ್ಕೆ ಚಿಕಿತ್ಸೆ ನೀಡಲು ಅಗತ್ಯವಾದ ಔಷಧಿಗಳು ಲಭ್ಯವಿದೆ” ಎಂದು ತಿಳಿಸಿದರು.

Leave a Reply

Your email address will not be published. Required fields are marked *