ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ | ಸಮಾರಂಭದಲ್ಲಿ ಗೀತಾ ಶಿವರಾಜ್‌ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗಿ
ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಂಜಾರ ಕನ್ವೆನ್ಸನ್ ಹಾಲ್‌ನಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ವೇತಾ ಬಂಡಿ ಅವರ ಅಧಿಕಾರ ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾಹಿತಿ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ, ಬಲ್ಕೀಶ್‌ಬಾನು, ಗೀತಾ ಶಿವರಾಜ್ ಕುಮಾರ್ ಹಾಗೂ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ ಸೇರಿದಂತೆ ಹಲವಾರು ಪಕ್ಷದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಹಿಂದೆ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ಅನಿತಾ ಕುಮಾರಿ ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇದೀಗ ಜಿ.ಪಂ ಮಾಜಿ ಸದಸ್ಯೆ ಶ್ವೇತಾ ಬಂಡಿಯವರು ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದು, ಅವರು ಕೂಡ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಬಲ ನೀಡಲಿದ್ದಾರೆ ಎಂದು ಅವರು ಹೇಳಿದರು.
ಶ್ವೇತಾ ಬಂಡಿ ಅವರು ಮಾತನಾಡಿ, “ಜಿಲ್ಲಾ ಪಂಚಾಯಿತಿ ಸದಸ್ಯೆಯಾಗಿ ಕೆಲಸ ಮಾಡಿದ ಅನುಭವವನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಶಕ್ತಿಶಾಲಿಯಾಗಿ ಸಂಘಟಿಸುತ್ತೇನೆ” ಎಂದು ಭರವಸೆ ನೀಡಿದರು.
ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಕಾರ್ಯದರ್ಶಿಗಳಾದ ಮಂಜುನಾಥ್ ಭಂಡಾರಿ, ಬಲ್ಕೀಷ್ ಭಾನು, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವು ನಾಯಕರು ಉಪಸ್ಥಿತರಿರಲಿದ್ದಾರೆ.ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಕಲಗೋಡು ರತ್ನಾಕರ್, ವೇದಾ ವಿಜಯಕುಮಾರ್, ಯಮುನಾ ರಂಗೇಗೌಡ, ರಾಮಚಂದ್ರ ಬಂಡಿ, ಭಾರತಿ ರಾಮಕೃಷ್ಣ, ಕವಿತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.







