Headlines

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ

ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿದರು.

ಸಭೆಯ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೆಪ್ಟೆಂಬರ್‌ 22 ರಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆರಂಭಿಸಿದ್ದೆವು. ಅಕ್ಟೋಬರ್ 7ರಂದು ಮುಕ್ತಾಯಕ್ಕೆ ತೀರ್ಮಾನಿಸಿದ್ದೆವು. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ.97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿವೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದರು.‌

ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18 ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದು ತಿಳಿಸಿದರು.

Exit mobile version