Breaking
12 Jan 2026, Mon

ಖಾಸಗಿ ಫೋಟೋ , ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಬ್ಲ್ಯಾಕ್‌ಮೇಲ್ ಕೇಸ್ ದಾಖಲು

ಖಾಸಗಿ ಫೋಟೋ-ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಶಿವಮೊಗ್ಗದಲ್ಲಿ ಬ್ಲ್ಯಾಕ್‌ಮೇಲ್ ಕೇಸ್

ಶಿವಮೊಗ್ಗ ಜಿಲ್ಲೆಯ ತಾಲೂಕಿನೊಂದರಲ್ಲಿ ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕದ್ದುಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲು ಯತ್ನಿಸಿ, ಹಣಕ್ಕೆ ಬೇಡಿಕೆ ಇಟ್ಟಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರಿನ ಪ್ರಕಾರ, ಅಪರಿಚಿತ ಮೊಬೈಲ್ ನಂಬರ್‌ನಿಂದ ಮಹಿಳೆಯ ವಾಟ್ಸಾಪ್‌ಗೆ ಆಕೆಯ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕಳುಹಿಸಿ, ಅವುಗಳನ್ನು ಡಿಲೀಟ್ ಮಾಡಬೇಕಾದರೆ ₹2 ಲಕ್ಷ ಹಣ ನೀಡಬೇಕು, ಇಲ್ಲದಿದ್ದರೆ ಜಾಲತಾಣಗಳಲ್ಲಿ ವೈರಲ್ ಮಾಡಿ ಮಾನಹಾನಿ ಮಾಡುತ್ತೇವೆ ಎಂದು ಬೆದರಿಸಲಾಗಿದೆ. ಆತಂಕಗೊಂಡ ಮಹಿಳೆ ಹಣ ನೀಡದೆ ಆ ನಂಬರ್‌ನ್ನು ಬ್ಲಾಕ್ ಮಾಡಿದ್ದರು.

ಆದರೆ ಎರಡು ದಿನಗಳ ಹಿಂದೆ, ದೂರುದಾರರ ಪತಿಯ ವಾಟ್ಸಾಪ್ ಸಂಖ್ಯೆಗೆ ಸಹ ಅದೇ ಫೋಟೋ ಮತ್ತು ವೀಡಿಯೋಗಳನ್ನು ಕಳುಹಿಸಲಾಗಿದೆ. ಈಗಾಗಲೇ ಅವು ತಾಲೂಕಿನಲ್ಲಿ ಹಲವರ ವಾಟ್ಸಾಪ್ ಗುಂಪುಗಳ ಮೂಲಕ ವೈರಲ್ ಆಗಿರುವ ಮಾಹಿತಿ ಪತಿಯ ಪರಿಚಿತರ ಮೂಲಕ ತಿಳಿದುಬಂದಿದೆ. ಇದರಿಂದ ಭಯಗೊಂಡ ದೂರುದಾರರು ತಕ್ಷಣ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

ಯಾವುದೋ ಮೂಲದಿಂದ ಖಾಸಗಿ ಫೋಟೋ-ವೀಡಿಯೋಗಳನ್ನು ಕದಿದು, ಅನುಮತಿ ಇಲ್ಲದೇ ಪ್ರಸಾರ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ಮನವಿ ಮಾಡಿಕೊಂಡಿದ್ದಾರೆ. ಸಿಇಎನ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್