POSTMANNEWS

ನೈಜ ಸುದ್ದಿ ನೇರ ಬಿತ್ತರ..

ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ

Recruitment process for 35,000 teachers begins in the upcoming academic year: Minister Madhu Bangarappa

ಮುಂಬರುವ ಶೈಕ್ಷಣಿಕ ವರ್ಷದಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಮಧು ಬಂಗಾರಪ್ಪ

Recruitment process for 35,000 teachers begins in the upcoming academic year: Minister Madhu Bangarappa

ರಿಪ್ಪನ್‌ಪೇಟೆ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಈ ಸೌಲಭ್ಯಗಳ ಸದುಪಯೋಗ ಪಡೆದು ವಿದ್ಯಾರ್ಥಿಗಳು ತಮ್ಮ ಗುರಿ ಸಾಧಿಸಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ರಿಪ್ಪನ್‌ಪೇಟೆ ಸಮೀಪದ ಕೋಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಯಳಗಲ್ಲು ಗ್ರಾಮದಲ್ಲಿ ಸುಮಾರು 28 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಹಾಗೂ ವಸತಿ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಕಡ್ಡಾಯಗೊಳಿಸಲಾಗಿದೆ. ಇದರಿಂದ ಮಕ್ಕಳಲ್ಲಿ ದೇಶಭಕ್ತಿ, ಶ್ರದ್ಧೆ ಹಾಗೂ ನಮ್ಮ ಸಂಸ್ಕೃತಿಯ ಮೌಲ್ಯಗಳು ಬೆಳೆದು ರಾಷ್ಟ್ರಾಭಿಮಾನ ಮೂಡಲಿದೆ ಎಂದರು.

ಪರಿಶಿಷ್ಟ ಜಾತಿ–ಜನಾಂಗದ 250 ಮಕ್ಕಳಿಗಾಗಿ ಸುಸಜ್ಜಿತ ವಸತಿ ಶಾಲೆ ನಿರ್ಮಿಸುವ ಮೂಲಕ ಸರ್ಕಾರ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡುತ್ತಿದೆ. ಈ ಸೌಲಭ್ಯಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಬರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಸಾರ್ವಜನಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಸಾಧಿಸಬೇಕು. ವಿದ್ಯಾರ್ಥಿಗಳು 625ಕ್ಕೆ 620 ಅಂಕಗಳಂತಹ ಉನ್ನತ ಸಾಧನೆ ಮಾಡುವ ಗುರಿ ಹೊಂದಬೇಕು ಎಂದು ಕರೆ ನೀಡಿದರು. ಶಿಕ್ಷಕರು ಮಕ್ಕಳ ತೇರ್ಗಡೆಗೆ ಸವಾಲಾಗಿ ತೆಗೆದುಕೊಳ್ಳಬೇಕು ಎಂದರು.

ರಾಜ್ಯದಲ್ಲಿನ 1.16 ಕೋಟಿ ಶಾಲಾ ಮಕ್ಕಳಿಗಾಗಿ 1591 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ. ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ ಸೇರಿದಂತೆ ವಾರದಲ್ಲಿ ಒಂದು ದಿನ ಮೊಟ್ಟೆ, ಹಾಲು, ರಾಗಿ ಮಾಲ್ಟ್ ಮೊದಲಾದ ಪೌಷ್ಟಿಕ ಆಹಾರ ಒದಗಿಸಲಾಗುತ್ತಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಬೋಧನೆ ಆರಂಭಿಸಿರುವ ಕಾರಣ ತರಬೇತಿ ಪಡೆದ ಶಿಕ್ಷಕರ ಅಗತ್ಯವಿದ್ದು, ಈ ಸಾಲಿನಲ್ಲಿ 11 ಸಾವಿರ ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದ ಮೊದಲ ಆರು ತಿಂಗಳಲ್ಲಿ 35 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವರು ಘೋಷಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ 500 ಕೆಪಿಎಸ್‌ಸಿ ಶಾಲೆಗಳನ್ನು ಪ್ರಾರಂಭಿಸುವ ಯೋಜನೆ ಇದ್ದು, ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗ ಜಿಲ್ಲೆಯಿಂದಲೇ ಚಾಲನೆ ನೀಡಲಿದ್ದಾರೆ ಎಂದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಅಥವಾ ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಶರಾಗಬಾರದು. ಅವರಿಗಾಗಿ ಮೂರು ಹಂತದ ಪರೀಕ್ಷಾ ಅವಕಾಶ ನೀಡಲಾಗಿದ್ದು, ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾಗಿ ಮುಂದಿನ ತರಗತಿಗೆ ಸಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಸಾಗರ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಹೊಸನಗರ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್.ಬಿ. ಚಿದಂಬರ್, ಕೋಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ, ಹುಂಚ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಂಗಲ ದೇವರಾಜ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About The Author