N. Satish of Ripponpete has been appointed as the new BJP Taluk President of Hosanagar following the demise of former president Mattimane Subrahmanya.
ಹೊಸನಗರ ತಾಲ್ಲೂಕು ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿದ್ದ ಮತ್ತಿಮನೆ ಸುಬ್ರಹ್ಮಣ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್ ಅವರು ಪಕ್ಷದ ಸಂಘಟನೆ, ಕಾರ್ಯಕ್ಷಮತೆ ಹಾಗೂ ಅನುಭವವನ್ನು ಪರಿಗಣಿಸಿ ಎನ್. ಸತೀಶ್ ಅವರನ್ನು ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ.
ಪ್ರಸ್ತುತ ರಿಪ್ಪನ್‌ಪೇಟೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಎನ್. ಸತೀಶ್ ಅವರು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಕಾರ್ಯಕರ್ತರನ್ನು ಒಗ್ಗೂಡಿಸುವಲ್ಲಿ ಹಾಗೂ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಸಂಘಟನಾ ಚಾತುರ್ಯ, ನೆಲಮಟ್ಟದ ಸಂಪರ್ಕ ಮತ್ತು ಪಕ್ಷದ ಮೇಲಿನ ನಿಷ್ಠೆಯನ್ನು ಗಮನಿಸಿ ತಾಲ್ಲೂಕು ಅಧ್ಯಕ್ಷ ಸ್ಥಾನ ಅವರಿಗೆ ಒಲಿದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಎನ್. ಸತೀಶ್ ಅವರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ, ಶಾಸಕ ಆರಗ ಜ್ಞಾನೇಂದ್ರ, ಬಿಜೆಪಿ ಮಾಜಿ ಜಿಲ್ಲಾ ಅಧ್ಯಕ್ಷ ಟಿ.ಡಿ. ಮೇಘರಾಜ್ , ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಸೇರಿದಂತೆ ಅನೇಕ ಪಕ್ಷದ ಹಿರಿಯ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಬೆಂಬಲಿಗರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ನೇಮಕದಿಂದ ಹೊಸನಗರ ತಾಲ್ಲೂಕಿನಲ್ಲಿ ಬಿಜೆಪಿ ಸಂಘಟನೆ ಇನ್ನಷ್ಟು ಬಲಗೊಳ್ಳಲಿದೆ ಎಂಬ ವಿಶ್ವಾಸ ಪಕ್ಷದ ವಲಯದಲ್ಲಿ ವ್ಯಕ್ತವಾಗಿದೆ.
