Headlines

ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ

An engineering student collapsed and died at a hostel in Shivamogga. Ganesh (21), a CSE student from Ballari, is suspected to have died due to a heart attack.

ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ

ಶಿವಮೊಗ್ಗ, ಜನವರಿ 9: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯಲ್ಲಿರುವ ಹಾಸ್ಟೆಲ್ ಒಂದರಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಳ್ಳಾರಿ ಜಿಲ್ಲೆಯ ಮೂಲದ ಗಣೇಶ್ (21) ಎಂದು ಗುರುತಿಸಲಾಗಿದೆ. ಗಣೇಶ್ ಶಿವಮೊಗ್ಗ ನಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಈತ ವಾಜಪೇಯಿ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ.

ಇಂದು (ಜ.9) ಬೆಳಿಗ್ಗೆ ಸ್ನಾನಕ್ಕೆ ತೆರಳಿದ ವೇಳೆ ಗಣೇಶ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ವಿಷಯ ತಿಳಿದ ಹಾಸ್ಟೆಲ್ ಸಿಬ್ಬಂದಿ ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲೇ ಗಣೇಶ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಯುವಕನ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ಮರಣೋತ್ತರ ಪರೀಕ್ಷೆ ವರದಿಯಿಂದ ತಿಳಿದುಬರಬೇಕಿದೆ.

ಗಣೇಶ್ ಪ್ರತಿಭಾವಂತ ಹಾಗೂ ಶಿಸ್ತಿನ ವಿದ್ಯಾರ್ಥಿಯಾಗಿದ್ದನು ಎಂದು ಆತನ ಸ್ನೇಹಿತರು ಹಾಗೂ ಸಹಪಾಠಿಗಳು ಕಂಬನಿ ಮಿಡಿದಿದ್ದಾರೆ. ಅಕಾಲಿಕ ಸಾವಿನಿಂದ ಕಾಲೇಜು ಮತ್ತು ವಿದ್ಯಾರ್ಥಿ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.