POSTMANNEWS

ನೈಜ ಸುದ್ದಿ ನೇರ ಬಿತ್ತರ..

ಬೆಂಕಿಗೆ ಅಹುತಿಯಾದ ಸ್ಲೀಪರ್ ಬಸ್‌ – ಸ್ಥಳಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ

Tahsildar Bharath Raj visited the spot and hospital after a private sleeper bus caught fire near Arasalu–Suduru villages on the Shivamogga–Hosanagar border. Eight passengers were injured.

ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಭಾರೀ ಆತಂಕಕ್ಕೆ ಕಾರಣವಾಯಿತು. ಅರಸಾಳು ಹಾಗೂ ಸುಡೂರು ಗ್ರಾಮಗಳ ಮಧ್ಯೆ ಈ ದುರ್ಘಟನೆ ನಡೆದಿದೆ.

ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ‘ಶ್ರೀ ಅನ್ನಪೂರ್ಣೇಶ್ವರಿ’ ಎಂಬ ಖಾಸಗಿ ಬಸ್‌ನಲ್ಲಿ ಚಾಲಕ ಹಾಗೂ ಕ್ಲೀನರ್ ಸೇರಿದಂತೆ ಒಟ್ಟು 38 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಚಲಿಸುತ್ತಿದ್ದ ವೇಳೆ ಬಸ್‌ನಿಂದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಎಚ್ಚೆತ್ತುಕೊಂಡ ಚಾಲಕ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಸಿ ಬಸ್ ನಿಲ್ಲಿಸಿದ್ದಾನೆ. ಪರಿಣಾಮ ದೊಡ್ಡ ಅನಾಹುತ ತಪ್ಪಿದೆ.

ಘಟನೆಯಿಂದ ಉಂಟಾದ ಗದ್ದಲದಲ್ಲಿ ಎಂಟು ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಘಟನೆ ನಡೆದ ತಕ್ಷಣವೇ ಹೊಸನಗರ ತಹಶೀಲ್ದಾರ್ ಭರತ್ ರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳ, ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಅವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ ಸಾಂತ್ವಾನ ಹೇಳಿದರು. ಸರ್ಕಾರದ ವತಿಯಿಂದ ಅಗತ್ಯ ನೆರವು ಒದಗಿಸುವ ಭರವಸೆಯನ್ನು ಅವರು ನೀಡಿದರು.

ಸ್ಥಳಕ್ಕೆ ಅಗ್ನಿಶಾಮಕ ದಳ, ಅಂಬುಲೆನ್ಸ್ ಹಾಗೂ ಪೊಲೀಸರು ಆಗಮಿಸಿ ಬೆಂಕಿ ನಂದಿಸಿ ಪರಿಸ್ಥಿತಿ ನಿಯಂತ್ರಿಸಿದರು. ಈ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಬಸ್‌ಗೆ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಪತ್ತೆಹಚ್ಚುವಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

About The Author