ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ – ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ
ಶಿವಮೊಗ್ಗ ಜಿಲ್ಲೆಯ ಮಹಿಳಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಏರ್ಪಡಿಸಿದ್ದ ಒಂದು ದಿನದ ವಿಶೇಷ ಕಾರ್ಯಾಗಾರವು ಇಂದು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ. ಎಸ್ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. IPS ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞರಾದ ಡಾ. ವೀಣಾ ಭಟ್, ನಿವೃತ್ತ ಪ್ರಾಧ್ಯಾಪಕರಾದ ಕಿರಣ್ ಆರ್ ದೇಸಾಯಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರ್ಯಪ್ಪ ಎ. ಜಿ. ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಮಹಿಳಾ ಪೊಲೀಸರ ಆರೋಗ್ಯ, ಆತ್ಮವಿಶ್ವಾಸ ವೃದ್ಧಿ, ಕರ್ತವ್ಯದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆಯರಿಗೆ ಲಭ್ಯವಿರುವ ಕಾನೂನು ನೆರವು ಕುರಿತಂತೆ ಸಮಗ್ರ ಮಾಹಿತಿ ನೀಡಲಾಯಿತು.
ಇದೇ ವೇಳೆ ಭದ್ರಾವತಿ ನಗರ ವೃತ್ತದ ಸಿಪಿಐ ನಾಗಮ್ಮ ಅವರು ಕರ್ತವ್ಯದ ವೇಳೆ ಎದುರಾಗುವ ಒತ್ತಡವನ್ನು ಹೇಗೆ ನಿಭಾಯಿಸಬೇಕು ಮತ್ತು ತನಿಖಾ ಕ್ರಮಗಳಲ್ಲಿ ಅನುಸರಿಸಬೇಕಾದ ಸೂಕ್ತ ವಿಧಾನಗಳ ಕುರಿತು ಪ್ರಾಯೋಗಿಕ ಸಲಹೆಗಳನ್ನು ಹಂಚಿಕೊಂಡರು.
ಒಟ್ಟಿನಲ್ಲಿ, ಮಹಿಳಾ ಪೊಲೀಸರ ಮನೋಸ್ಥೈರ್ಯ ಮತ್ತು ಕಾರ್ಯಕ್ಷಮತೆಯನ್ನು ವೃದ್ಧಿಸಲು ಈ ಕಾರ್ಯಾಗಾರ ಮಹತ್ವದ ಹೆಜ್ಜೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್