ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ ದುರಂತ: 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ
Three members of a family, including a 3-year-old child, died after a rain-triggered landslide struck their shed in Indira Nagar, Thirthahalli, Shivamogga district.
ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ 3 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ತಡರಾತ್ರಿ ಸುಮಾರು 2:30 ಗಂಟೆ ವೇಳೆಗೆ ಸುರಿದ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದಿದ್ದು, ಗುಡ್ಡದ ಕೆಳಭಾಗದಲ್ಲಿ ಶೆಡ್ ನಿರ್ಮಿಸಿಕೊಂಡು ವಾಸಿಸುತ್ತಿದ್ದ ಕುಟುಂಬದ ಮೇಲೆ ಮಣ್ಣು ಬಿದ್ದಿದೆ. ಪರಿಣಾಮವಾಗಿ ಶೆಡ್ ಸಂಪೂರ್ಣವಾಗಿ ಮಣ್ಣಿನಡಿ ಸಿಲುಕಿದ್ದು, ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ಮಲ್ಲಿಕಾರ್ಜುನ (35), ಪತ್ನಿ ನಾಗವೇಣಿ (28) ಹಾಗೂ ಪುತ್ರ ಸಂತೋಷ್ (3) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ಸಿಬ್ಬಂದಿ ಹರಸಾಹಸ ಪಟ್ಟರು.
ಇದೇ ವೇಳೆ ಪಕ್ಕದ ಶೆಡ್‌ನಲ್ಲಿ ವಾಸಿಸುತ್ತಿದ್ದ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.



