ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ
ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10 ಸಾವಿರ ಬಹುಮಾನ – ಬೇಳೂರು ಘೋಷಣೆ
Hosanagara MLA Beluru Gopalakrishna said teachers play a vital role in the development of any nation during Dr. S. Radhakrishnan’s 138th birth anniversary celebration.
ಹೊಸನಗರ: ಯಾವುದೇ ದೇಶ ಅಭಿವೃದ್ಧಿ ಹೊಂದಬೇಕಾದರೆ ಆ ದೇಶದ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿರುತ್ತದೆ ಎಂದು ಹೊಸನಗರ–ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ಹೊಸನಗರದ ಆರ್ಯ ಈಡಿಗರ ಭವನದಲ್ಲಿ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 138ನೇ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಅಜ್ಞಾನವೆಂಬ ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುವವರು ಗುರುಗಳಾಗಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಯೂ ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ಗುರುವಿನ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಶಿಕ್ಷಣ ಮತ್ತು ಬುದ್ಧಿವಂತಿಕೆಯನ್ನು ಕಲಿಸುವುದರೊಂದಿಗೆ ಜೀವನಕ್ಕೆ ಸ್ಫೂರ್ತಿ ನೀಡುವ ಶಿಕ್ಷಕರು ದೇಶದ ಪ್ರತಿಯೊಂದು ಭಾಗದಲ್ಲಿರುವುದು ನಮ್ಮ ಹೆಮ್ಮೆ ಎಂದು ಹೇಳಿದರು.
ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10 ಸಾವಿರ ಬಹುಮಾನ
ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ಶಾಲೆ ಬಿಟ್ಟಿರುವ ಮಕ್ಕಳು ಎಲ್ಲೇ ಇದ್ದರೂ ಅವರನ್ನು ಗುರುತಿಸಿ ಮತ್ತೆ ಶಾಲೆಗೆ ಕರೆತರುವ ಶಿಕ್ಷಕರಿಗೆ ₹10 ಸಾವಿರ ಬಹುಮಾನ ನೀಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಿಸಿದರು.
ಹೊಸನಗರ ತಾಲೂಕಿನಲ್ಲಿ ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿರುವ ಗುರುಭವನ ನಿರ್ಮಾಣಕ್ಕೆ ಶಾಸಕರ ನಿಧಿ ಹಾಗೂ ಸರ್ಕಾರದ ಅನುದಾನದಿಂದ ನೆರವು ಒದಗಿಸಲಾಗುವುದು ಎಂದರು. ಅಲ್ಲದೆ, ತಾಲೂಕು ಶಿಕ್ಷಣಾಧಿಕಾರಿಗಳ ಓಡಾಟಕ್ಕಾಗಿ ಜೀಪ್ ಒದಗಿಸುವ ಭರವಸೆಯನ್ನೂ ನೀಡಿದರು.
ಆದರೆ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿ ಹೊಸನಗರ ತಾಲೂಕನ್ನು ರಾಜ್ಯದಲ್ಲೇ ಪ್ರಥಮ ಸ್ಥಾನಕ್ಕೆ ತರುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ. ಚಿದಂಬರ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರೀತಿ ಮತ್ತು ವಾತ್ಸಲ್ಯದಿಂದ ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದನ್ನು ತಿಳಿಸಿಕೊಡುವವರೇ ನಿಜವಾದ ಶಿಕ್ಷಕರು ಎಂದರು.
ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ತಂದೆ-ತಾಯಿಯರಂತೆ ಗೌರವಿಸಬೇಕು. ಜೀವನದ ಪಾಠ ಕಲಿಸಿದ ಶಿಕ್ಷಕರನ್ನು ಜೀವನದ ಕೊನೆಯವರೆಗೂ ಗೌರವಿಸಿ ಅಭಿನಂದಿಸಬೇಕು ಎಂದು ಹೇಳಿದರು.
ಶಿಕ್ಷಕರ ಮೇಲಿನ ಹೆಚ್ಚುವರಿ ಕೆಲಸದ ಹೊರೆ ಕಡಿಮೆ ಮಾಡುವಂತೆ ಮನವಿ
ಹೊಸನಗರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿ, ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರಿಗೆ ಬೋಧನೆಯ ಹೊರತಾಗಿ ಸರ್ಕಾರದ ವಿವಿಧ ಕೆಲಸಗಳ ಹೊರೆ ಹೆಚ್ಚುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಶಿಕ್ಷಕರು ಪಾಠ ಮಾಡುವುದರ ಜೊತೆಗೆ ವಿವಿಧ ದಾಖಲೆ ನಿರ್ವಹಣೆ, ಚುನಾವಣೆ ಕರ್ತವ್ಯ ಸೇರಿದಂತೆ ಅನೇಕ ಹೆಚ್ಚುವರಿ ಕೆಲಸಗಳನ್ನು ನಿರ್ವಹಿಸಬೇಕಾಗಿದೆ. ಇಂತಹ ಆಡಳಿತಾತ್ಮಕ ಕೆಲಸಗಳಿಗಾಗಿ ಪ್ರತ್ಯೇಕ ಸಿಬ್ಬಂದಿಯನ್ನು ನೇಮಿಸಿದರೆ ಶಿಕ್ಷಕರು ವಿದ್ಯಾರ್ಥಿಗಳ ಶಿಕ್ಷಣದ ಕಡೆ ಹೆಚ್ಚು ಗಮನಹರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಶಿಕ್ಷಕರ ಮೇಲಿನ ಅನಗತ್ಯ ಹೆಚ್ಚುವರಿ ಕೆಲಸದ ಹೊರೆಯನ್ನು ಸರ್ಕಾರ ಕಡಿಮೆ ಮಾಡಿದರೆ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಮಕ್ಕಳನ್ನು ಉತ್ತಮವಾಗಿ ತಯಾರು ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಭರತ್‌ರಾಜ್, ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ನೌಕರರ ಸಂಘದ ಅಧ್ಯಕ್ಷ ಸೋಮಶೇಖರ್, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್ ಎಸ್.ಪಿ., ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರೇಣುಕೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ದೈಹಿಕ ಶಿಕ್ಷಣ ಪರಿವೀಕ್ಷಕ ವಿನಯ್ ಹೆಗ್ಡೆ, ಸಹಾಯಕ ನಿರ್ದೇಶಕ ಹಾಗೂ ಸಮನ್ವಯಾಧಿಕಾರಿ ಎಂ. ರಂಗನಾಥ್, ಕರಿಬಸಪ್ಪ, ಪುಟ್ಟಪ್ಪ, ವೆಂಕಟೇಶ್, ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧರ್ಮಪ್ಪ ಮಾಲಾತೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.