ಅಕ್ಟೋಬರ್ 14ರಂದು ಹೊಸನಗರದಲ್ಲಿ ‘ಮ್ಯಾರಥಾನ್ ನಡಿಗೆ’; ಸೇವಾ ಸಂಕಲ್ಪ ದಿನಾಚರಣೆಗೆ ಸಿದ್ಧತೆ
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮೊದಲ ಬಾರಿಗೆ ಹೊಸನಗರಕ್ಕೆ – ಅದ್ದೂರಿ ಸ್ವಾಗತಕ್ಕೆ ಸಿದ್ಧತೆ | BJP leader Haratalu Halappa announced preparations for a marathon walk and service activities in Hosanagara on October 14 as part of Seva Sankalpa Day celebrations.
ಹೊಸನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದ 25ನೇ ವರ್ಷವನ್ನು ‘ಸೇವಾ ಸಂಕಲ್ಪ ದಿನ’ವಾಗಿ ದೇಶಾದ್ಯಂತ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಅಕ್ಟೋಬರ್ 14ರಂದು ಹೊಸನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದ್ದಾರೆ.
ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಪೂರ್ವಭಾವಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನರಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಮ್ಯಾರಥಾನ್ ನಡಿಗೆ ಆಯೋಜಿಸಲಾಗಿದೆ ಎಂದು ಹೇಳಿದರು.
ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ಮ್ಯಾರಥಾನ್ ನಡಿಗೆ ಆರಂಭವಾಗಲಿದ್ದು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯುವ ಬಹಿರಂಗ ಸಭೆಯೊಂದಿಗೆ ಕಾರ್ಯಕ್ರಮ ಸಮಾರೋಪಗೊಳ್ಳಲಿದೆ.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸಲಿದ್ದು, ಅವರು ಮೊದಲ ಬಾರಿಗೆ ಹೊಸನಗರ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅದ್ದೂರಿ ಸ್ವಾಗತಕ್ಕೆ ಸಿದ್ಧತೆ ನಡೆಸಲಾಗಿದೆ. ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸೇವಾ ಸಂಕಲ್ಪ ದಿನದ ಅಂಗವಾಗಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಟಿ.ಡಿ. ಮೇಘರಾಜ್ ತಿಳಿಸಿದರು. ಈ ಕಾರ್ಯಕ್ರಮವನ್ನು ಎಸ್ಸಿ-ಎಸ್ಟಿ ಮೋರ್ಚಾದ ವತಿಯಿಂದ ಆಯೋಜಿಸಲಾಗುತ್ತಿದ್ದು, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಜವಾಬ್ದಾರಿ ನೀಡುವ ಉದ್ದೇಶದಿಂದ ವಿಶೇಷ ಅಭಿಯಾನ ನಡೆಸಲಾಗುತ್ತಿದೆ ಎಂದರು.
ಹೊಸನಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್. ಸತೀಶ್, ಬಿಜೆಪಿ ಜಿಲ್ಲಾ ಮುಖಂಡರಾದ ಎನ್.ಆರ್. ದೇವಾನಂದ, ಪ್ರಶಾಂತ್ ಕುಕ್ಕೆ, ಗಣಪತಿ ಬೆಳಗೋಡು, ಎ.ಟಿ. ನಾಗರತ್ನ, ಪರಮೇಶ್ ಹೊನ್ನಕೊಪ್ಪ, ವೀರೇಶ್ ಅಲವಳ್ಳಿ, ಜಿ.ಡಿ. ಮಲ್ಲಿಕಾರ್ಜುನ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.
