ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದ ಲೇಖನಾ ನಾಯ್ಕ್! ಕಸಬಾ ಜಿಪಂ ಕ್ಷೇತ್ರದ ರಾಜಕೀಯ ಲೆಕ್ಕಾಚಾರವೇನು? | Lekhana Naik, SNDP state secretary and CDC member of Ripponpete Pre-University College, joined the BJP in the presence of state president B.Y. Vijayendra at an event in Hosanagara.
ಹೊಸನಗರ: ಎಸ್ಎನ್ಡಿಪಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಹಾಗೂ ರಿಪ್ಪನ್ಪೇಟೆ ಪದವಿಪೂರ್ವ ಕಾಲೇಜಿನ ಸಿಡಿಸಿ ಸದಸ್ಯೆಯಾಗಿರುವ ಲೇಖನಾ ನಾಯ್ಕ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಹೊಸನಗರದಲ್ಲಿ ಇಂದು ಆಯೋಜಿಸಲಾಗಿದ್ದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ನಡೆದ ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ, ಬೈಕ್ ರ್ಯಾಲಿ, ಮಹಿಳಾ ಆರೋಗ್ಯ ಶಿಬಿರ ಹಾಗೂ ದಿವ್ಯಾಂಗ ಚೇತನರಿಗೆ ನೆರವು ನೀಡುವ ವಿಶೇಷ ಸೇವಾ ಕಾರ್ಯಕ್ರಮದಲ್ಲಿ ಲೇಖನಾ ನಾಯ್ಕ್ ಅವರು ಅಧಿಕೃತವಾಗಿ ಬಿಜೆಪಿ ಸೇರಿದರು.
ಕಳೆದ ವರ್ಷ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಲೇಖನಾ ನಾಯ್ಕ್, ಬಳಿಕ ಮತ್ತೆ ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿರುವುದು ಸ್ಥಳೀಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಕಸಬಾ ಜಿ.ಪಂ. ಕ್ಷೇತ್ರದಿಂದ ಸ್ಪರ್ಧಿಸುವ ಅಪೇಕ್ಷೆಯಿಂದ ಪಕ್ಷಾಂತರ ನಡೆಸಿದ್ದಾರೆ ಎನ್ನಲಾಗಿದ್ದು, ಈ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.
ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಸ್ವಾಮಿ ರಾವ್, ಕೆ.ಜಿ. ಕುಮಾರಸ್ವಾಮಿ, ಭಾರತಿ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಹೊಸನಗರ ಮಂಡಲ ಅಧ್ಯಕ್ಷ ಎನ್. ಸತೀಶ್, ಪ್ರಭಾರಿ ಟಿ.ಡಿ. ಮೇಘರಾಜ್, ಪ್ರಕೋಷ್ಟ ಪ್ರಭಾರಿ ದತ್ತಾತ್ರಿ ಸೇರಿದಂತೆ ಹಲವು ಪ್ರಮುಖರು, ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
