ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಕ್ರಮ | Students showcased their favourite books at a programme organised by IQAC, the Kannada Department, and the Library at Government First Grade College, Ripponpete.
ರಿಪ್ಪನ್ ಪೇಟೆ : ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಹಾಗೂ ಓದಿನ ಮಹತ್ವವನ್ನು ತಿಳಿಸುವ ಉದ್ದೇಶದಿಂದ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಟೋಬರ್ 15ರಂದು ‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ), ಕನ್ನಡ ವಿಭಾಗ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಪ್ರೊ. ರಾಜು ಆರ್.ಕೆ. ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪುಸ್ತಕಗಳು ವ್ಯಕ್ತಿತ್ವ ವಿಕಸನಕ್ಕೆ ದಾರಿದೀಪವಾಗಬೇಕು. ವ್ಯಕ್ತಿಯ ಜ್ಞಾನ, ಚಿಂತನೆ ಹಾಗೂ ವ್ಯಕ್ತಿತ್ವವನ್ನು ಸದೃಢಗೊಳಿಸುವಲ್ಲಿ ಪುಸ್ತಕಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ 16ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಮೆಚ್ಚಿನ ಪುಸ್ತಕಗಳನ್ನು ಪರಿಚಯಿಸುವ ಮೂಲಕ ಗಮನ ಸೆಳೆದರು. ಪುಸ್ತಕಗಳ ವಿಷಯವಸ್ತು, ಅವುಗಳಿಂದ ತಾವು ಕಲಿತ ವಿಚಾರಗಳು ಹಾಗೂ ಓದಿನ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿದ್ದ ನಿರ್ವಹಣಾ ಶಾಸ್ತ್ರದ ಪ್ರಾಧ್ಯಾಪಕ ಡಾ. ರವೀಶ್ ಎನ್.ಎಸ್. ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕಗಳನ್ನು ಪ್ರೀತಿಸುವ ಕಲೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಚಾಟ್ಜಿಪಿಟಿಯಂತಹ ಅಪ್ಲಿಕೇಶನ್ಗಳ ಬಳಕೆ ಹೆಚ್ಚಾಗಿದ್ದು, ಇದರಿಂದ ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗುತ್ತಿರುವ ಬಗ್ಗೆ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ತಂತ್ರಜ್ಞಾನದ ಬಳಕೆಯ ಜೊತೆಗೆ ಪುಸ್ತಕ ಓದುವ ಅಭ್ಯಾಸಕ್ಕೂ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು ಎಂದು ತಿಳಿಸಿದರು.
ತಮ್ಮ ಮೆಚ್ಚಿನ ಪುಸ್ತಕಗಳನ್ನು ಅತ್ಯುತ್ತಮವಾಗಿ ಪರಿಚಯಿಸಿದ ಮೂವರು ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು.
ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಕು. ನಯನ ಹೆಚ್., ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ಶಿವಾಜಿ ರಾವ್ ಕೆ. ಹಾಗೂ ನಂದಿನಿ ಎಲ್. ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.
ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕ ರಾಜು ನಾಯ್ಕ್ ಎಸ್. ಅವರು ಸ್ವಾಗತಿಸಿದರು. ಕು. ನಮ್ರತಾ ಮತ್ತು ತಂಡ ಪ್ರಾರ್ಥಿಸಿದರು. ಕು. ಕಾವ್ಯ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಕುಮಾರ ಎಂ. ಮುದ್ದಿನಕೊಪ್ಪ ಅವರು ವಂದಿಸಿದರು.
