w
Headlines
Home » ಜನರ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತಲುಪಿಸುವುದೇ ಪ್ರಜಾಸೇವಾ ಆಂದೋಲನದ ಉದ್ದೇಶ: ಮಧು ಬಂಗಾರಪ್ಪ

ಜನರ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತಲುಪಿಸುವುದೇ ಪ್ರಜಾಸೇವಾ ಆಂದೋಲನದ ಉದ್ದೇಶ: ಮಧು ಬಂಗಾರಪ್ಪ

IMG 20261005 WA0018

ಜನರ ಮನೆ ಬಾಗಿಲಿಗೆ ಸರ್ಕಾರಿ ಸೇವೆ ತಲುಪಿಸುವುದೇ ಪ್ರಜಾಸೇವಾ ಆಂದೋಲನದ ಉದ್ದೇಶ: ಮಧು ಬಂಗಾರಪ್ಪ | Sagar Prajaseva Andolana: Minister Madhu Bangarappa says government services should reach people’s doorstep; public grievances on drought, land titles, roads, housing and bus connectivity raised.

ಸಾಗರ, ಅ.5: ಸರ್ಕಾರದ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಬೇಕು. ಜನರ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಒದಗಿಸುವುದು ಸರ್ಕಾರದ ಆಶಯವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ಸಾಗರದ ಗಾಂಧಿ ಮೈದಾನದಲ್ಲಿ ಸೋಮವಾರ ನಡೆದ ಸಾಗರ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಉದ್ಘಾಟಿಸಿ ಅವರು ಮಾತನಾಡಿ ಆಡಳಿತ ವ್ಯವಸ್ಥೆಗೆ ಚುರುಕು ನೀಡುವುದರ ಜೊತೆಗೆ ಗ್ರಾಮೀಣ ಭಾಗದ ಜನರ ಜ್ವಲಂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಸಭೆಗಳನ್ನು ನಡೆಸಲಾಗುತ್ತಿದ್ದು, ಇಲ್ಲಿ ಸ್ವೀಕರಿಸುವ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು ಎಂದರು.

ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ನಡೆದ ‘ಜನಸ್ಪಂದನ’ ಕಾರ್ಯಕ್ರಮದ ಮಾದರಿಯಲ್ಲಿ ಪ್ರಸ್ತುತ ಪ್ರಜಾಸೇವಾ ಆಂದೋಲನವನ್ನು ರೂಪಿಸಲಾಗಿದೆ. ಈ ಕಾರ್ಯಕ್ರಮದ ಮೂಲಕ ಪ್ರಾದೇಶಿಕ ಸಮಸ್ಯೆಗಳು ಸರ್ಕಾರದ ಗಮನಕ್ಕೆ ಬರುವುದಲ್ಲದೆ, ಅವುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದರು.

1,250 ಕೆಪಿಎಸ್ ಶಾಲೆಗಳ ಆರಂಭ

ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ರಾಜ್ಯಾದ್ಯಂತ 1,250 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, 2026ರ ಡಿಸೆಂಬರ್ ಅಂತ್ಯದೊಳಗೆ ಅವುಗಳನ್ನು ಉದ್ಘಾಟಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

ಈ ಯೋಜನೆಗೆ ಸುಮಾರು ₹4,300 ಕೋಟಿ ವೆಚ್ಚ ಮಾಡಲಾಗುತ್ತಿದೆ. ಒಂದೇ ಶಾಲಾ ಆವರಣದಲ್ಲಿ ಒಂದನೇ ತರಗತಿಯಿಂದ ಪದವಿಪೂರ್ವ ಶಿಕ್ಷಣದವರೆಗೆ ಉಚಿತ ಶಿಕ್ಷಣ ನೀಡುವ ಉದ್ದೇಶ ಹೊಂದಲಾಗಿದೆ. ಅಗತ್ಯ ಮೂಲಸೌಕರ್ಯ, ಶಿಕ್ಷಕರ ನೇಮಕಾತಿ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

50 ಸಾವಿರ ನಿವೇಶನ ಸೃಷ್ಟಿಗೆ ಸೂಚನೆ

ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಸರ್ಕಾರದ ಸೇವೆಗಳು ಕಚೇರಿಗಳಿಗೆ ಮಾತ್ರ ಸೀಮಿತವಾಗದೆ ಜನರ ಬದುಕಿನಲ್ಲಿ ಬದಲಾವಣೆ ತರಬೇಕು. ಪ್ರಜಾಸೇವಾ ಆಂದೋಲನದ ಮೂಲಕ ಸರ್ಕಾರ ಜನರ ಸಮಸ್ಯೆಗಳಿಗೆ ಕಿವಿಗೊಡಲಿದೆ ಎಂದರು.
ವಸತಿ ರಹಿತರಿಗೆ ನಿವೇಶನ ಒದಗಿಸಲು ಪ್ರತಿ ಜಿಲ್ಲೆಯಲ್ಲಿ 50 ಸಾವಿರ ನಿವೇಶನಗಳನ್ನು ಸೃಜಿಸುವಂತೆ ಸೂಚಿಸಿರುವುದು ಸ್ವಾಗತಾರ್ಹ. ಸಾಗರ ತಾಲೂಕಿನಲ್ಲಿ ಸುಮಾರು 10 ಸಾವಿರ ನಿವೇಶನಗಳ ಬೇಡಿಕೆ ಬರುವ ಸಾಧ್ಯತೆ ಇದೆ ಎಂದು ಹೇಳಿದರು.

ಸಾಗರ ಪಟ್ಟಣದಲ್ಲಿ ಕಳೆದ ಕೆಲವು ತಿಂಗಳಿಂದ ಹಸುಗಳ ಕಳ್ಳತನ ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಗೋ ಕಳ್ಳರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರಿಗೆ ಸೂಚಿಸಿದರು.

ಸಭೆಯಲ್ಲಿ ಪ್ರಮುಖ ಅಹವಾಲುಗಳು

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಾರದ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ. ಸಾಗರ ತಾಲೂಕನ್ನು ಬರಪೀಡಿತ ತಾಲೂಕಾಗಿ ಘೋಷಿಸಿ ಅಗತ್ಯ ಪರಿಹಾರ ಮತ್ತು ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಲಾಯಿತು. ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸಲಾಯಿತು.

ಸಭೆಯಲ್ಲಿ ಖಾತೆ ಬದಲಾವಣೆ, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ವಸತಿ ಸೌಲಭ್ಯ, ರಸ್ತೆ ದುರಸ್ತಿ ಹಾಗೂ ಬಸ್ ಸಂಪರ್ಕ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸಾರ್ವಜನಿಕರಿಂದ ಅಹವಾಲುಗಳು ಸಲ್ಲಿಕೆಯಾದವು.

2001ರಲ್ಲಿ ನಿಯಮಾನುಸಾರ ಹಕ್ಕು ಹೊಂದಿರುವ ಜಮೀನುಗಳಿಗೆ ಹಕ್ಕುಪತ್ರ ನೀಡುವಲ್ಲಿ ತಹಸೀಲ್ದಾರರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಜೆ.ಎಲ್. ರಾಜಕುಮಾರ್ ಅಹವಾಲು ಸಲ್ಲಿಸಿದರು.
ಬರೂರು-ಕೊರ್ಲಿಕೊಪ್ಪದಿಂದ ಸಾಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ರಸ್ತೆ ದುರಸ್ತಿಗೊಳಿಸಿ ಬಸ್ ಸಂಪರ್ಕ ಕಲ್ಪಿಸುವಂತೆ ಹರ್ಷಿಕಾ ಹಾಗೂ ಕಾರ್ತಿಕ್ ಮನವಿ ಮಾಡಿದರು.

ವೈದ್ಯಾಧಿಕಾರಿ ಡಾ. ನಾಗೇಂದ್ರಪ್ಪ ಅವರ ನಿರ್ಲಕ್ಷ್ಯದಿಂದ ಶಸ್ತ್ರಚಿಕಿತ್ಸೆಗೆ ಬಂದ ಮಹಿಳೆಯ ಕಿಡ್ನಿಗೆ ತೊಂದರೆಯಾಗಿದೆ ಎಂದು ರೂಪ ಶೆಟ್ಟಿ ಆರೋಪಿಸಿ, ವೈದ್ಯರ ವಿರುದ್ಧ ಕ್ರಮ ಕೈಗೊಂಡು ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಅರಣ್ಯಾಧಿಕಾರಿ ಪ್ರಸನ್ನ ಪುಟ್ಟಗಾಯ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಆರ್. ಜಯಂತ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವನ್ಯಜೀವಿ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಇದೇ ಸಂದರ್ಭದಲ್ಲಿ ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.