10ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳ ನಂಟು! ಆನಂದಪುರ ಮನೆ ಕಳ್ಳತನ ಪ್ರಕರಣದಲ್ಲಿ ಅಂತರ್ಜಿಲ್ಲಾ ಆರೋಪಿ ಅರೆಸ್ಟ್ | Anandapura Police have arrested inter-district theft accused Mohammed Yunus alias Chandu in connection with a house burglary in Yedehalli, Sagar taluk, and recovered gold ornaments worth approximately ₹12 lakh
ಶಿವಮೊಗ್ಗ: ಸಾಗರ ತಾಲೂಕಿನ ಯಡೆಹಳ್ಳಿಯಲ್ಲಿ ಕಳೆದ ಸೆಪ್ಟೆಂಬರ್ನಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಆನಂದಪುರ ಪಿಎಸ್ ಐ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿ ಪೊಲೀಸರು ಭೇದಿಸಿದ್ದು, ಅಂತರ್ಜಿಲ್ಲಾ ಮಟ್ಟದಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ ಮೊಹಮ್ಮದ್ ಯೂನುಸ್ ಅಲಿಯಾಸ್ ಚಾಂದು ಬಂಧಿತ ಆರೋಪಿಯಾಗಿದ್ದಾನೆ.
ಕಳೆದ ಸೆಪ್ಟೆಂಬರ್ನಲ್ಲಿ ಸಾಗರ ತಾಲೂಕಿನ ಯಡೆಹಳ್ಳಿಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ಜಾಡು ಹಿಡಿದು ತನಿಖೆ ಮುಂದುವರಿಸಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ₹12 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಾಥಮಿಕ ತನಿಖೆಯ ವೇಳೆ ಆರೋಪಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ 10ಕ್ಕೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.
ಆರೋಪಿಯ ಬಂಧನದೊಂದಿಗೆ ಯಡೆಹಳ್ಳಿ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
