ಹೊಸನಗರದಲ್ಲಿ ಪ್ರಜಾಸೇವೆ ಆಂದೋಲನ: ಜನರ ಸಮಸ್ಯೆ ಆಲಿಸಿದ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು , ಆರಗ | Shivamogga District Minister Madhu Bangarappa reviewed 180 public grievances at the Prajaseve Andolana in Hosanagara. MLA Gopalakrishna Belur’s appointment as Chief Whip was also announced.
ಹೊಸನಗರ, ನ.21: ಶಿವಮೊಗ್ಗ ಜಿಲ್ಲಾ ಆಡಳಿತ ಹಾಗೂ ಹೊಸನಗರ ತಾಲೂಕು ಆಡಳಿತದ ವತಿಯಿಂದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಧ್ಯೇಯವಾಕ್ಯದೊಂದಿಗೆ ಆಯೋಜಿಸಿದ್ದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಹೊಸನಗರದ ಈಡಿಗರ ಭವನದಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಯತ್ನ ನಡೆಯಿತು.
ಕಾರ್ಯಕ್ರಮ ಆರಂಭಕ್ಕೂ 30 ನಿಮಿಷ ಮುಂಚಿತವಾಗಿಯೇ ಸಭಾ ಸ್ಥಳಕ್ಕೆ ಆಗಮಿಸಿದ ಸಚಿವ ಮಧು ಬಂಗಾರಪ್ಪ ಅವರು, ಶಾಸಕ ಗೋಪಾಲಕೃಷ್ಣ ಬೇಳೂರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಾಷಣ ಮಾಡುವುದಕ್ಕಿಂತ ಜನರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರ ಒದಗಿಸುವುದೇ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಬೇಕು ಎಂದು ತಿಳಿಸಿದರು.
“ನಾವು ಇಲ್ಲಿ ಭಾಷಣ ಮಾಡುವ ಬದಲು ಜನರ ಸಮಸ್ಯೆಗಳನ್ನು ಆಲಿಸೋಣ. ಕಾರ್ಯಕ್ರಮವನ್ನು ಕೂಡಲೇ ಆರಂಭಿಸಿ, ಅಹವಾಲುಗಳಿಗೆ ಪರಿಹಾರ ಕಲ್ಪಿಸುವ ಕೆಲಸ ಮಾಡೋಣ. ಪ್ರಜಾಸೇವೆಯ ಉದ್ದೇಶವನ್ನು ನೀವು ತಿಳಿಸಿ” ಎಂದು ಹೇಳುವ ಮೂಲಕ ವೇದಿಕೆಯ ಭಾಷಣದ ಜವಾಬ್ದಾರಿಯನ್ನು ಶಾಸಕರಿಗೆ ವಹಿಸಿದರು.
ಇದೇ ವೇಳೆ ವಯೋವೃದ್ಧರು, ವಿಕಲಚೇತನರು ಹಾಗೂ ಮಕ್ಕಳಿಗೆ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಅವರು ನೇರವಾಗಿ ಬಂದು ತಮ್ಮ ಮನವಿಗಳನ್ನು ಸಲ್ಲಿಸಬಹುದು ಎಂದು ಸೂಚಿಸುವ ಮೂಲಕ ಸಾರ್ವಜನಿಕರ ಅನುಕೂಲಕ್ಕೆ ಆದ್ಯತೆ ನೀಡಿದರು.
250 ಕ್ಕೂ ಹೆಚ್ಚು ಅರ್ಜಿಗಳ ಪರಿಶೀಲನೆ; ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ
ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ವಿಶೇಷ ಆಸಕ್ತಿ ವಹಿಸಿದ ಸಚಿವ ಮಧು ಬಂಗಾರಪ್ಪ ಅವರು ಸಭೆಯಲ್ಲಿ ಕುಳಿತು ಒಟ್ಟು ಹಲವು ಅರ್ಜಿಗಳನ್ನು ಪರಿಶೀಲಿಸಿದರು. ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರೆ, ಇನ್ನುಳಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಂತರ ಶಾಸಕ ಬೇಳೂರು ಗೋಪಾಲಕೃಷ್ಣ ಕಾರ್ಯಕ್ರಮ ಮುಗಿಯುವವರೆಗೂ ಅರ್ಜಿಗಳನ್ನು ಪರಿಶೀಲಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ಜಿಲ್ಲೆಗೆ ಅವರ ಸಹಕಾರ ಮಹತ್ವದ್ದಾಗಿದೆ ಎಂದರು.
ಪ್ರಜಾಸೇವೆ ಕಾರ್ಯಕ್ರಮವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಲಭ್ಯವಿರುವುದರಿಂದ ಜನರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ತಿಳಿಸಬೇಕು. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.
ಬೇಳೂರು ಗೋಪಾಲಕೃಷ್ಣಗೆ ಮುಖ್ಯ ಸಚೇತಕ ಸ್ಥಾನ: ಸಚಿವರಿಂದ ಘೋಷಣೆ
ಇದೇ ಸಂದರ್ಭದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕರ್ನಾಟಕ ಸರ್ಕಾರದ ವಿಧಾನಸಭೆಯ ಮುಖ್ಯ ಸಚೇತಕರಾಗಿ ನೇಮಕಗೊಂಡಿರುವ ವಿಚಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಭೆಯಲ್ಲಿ ಅಧಿಕೃತವಾಗಿ ಘೋಷಿಸಿದರು. ಈ ಸುದ್ದಿ ತಿಳಿಯುತ್ತಿದ್ದಂತೆ ಬೇಳೂರು ಅಭಿಮಾನಿಗಳು ಜೈಕಾರ ಕೂಗಿ ಸಂಭ್ರಮ ವ್ಯಕ್ತಪಡಿಸಿದರು.
ನಂತರ ಸಚಿವ ಮಧು ಬಂಗಾರಪ್ಪ, ಶಾಸಕ ಆರಗ ಜ್ಞಾನೇಂದ್ರ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಸೇರಿದಂತೆ ಹಲವು ಗಣ್ಯರು ಶಾಸಕ ಬೇಳೂರು ಅವರಿಗೆ ಅಭಿನಂದನೆ ಸಲ್ಲಿಸಿದರು.
ಕೊನೆಯವರೆಗೂ ಸಾರ್ವಜನಿಕರ ಅಹವಾಲು ಆಲಿಸಿದ ಬೇಳೂರು ಗೋಪಾಲಕೃಷ್ಣ
ಕಾರ್ಯಕ್ರಮದ ಕೊನೆಯವರೆಗೂ ಸಭೆಯಲ್ಲಿ ಹಾಜರಿದ್ದು ಸಾರ್ವಜನಿಕರ ಎಲ್ಲ ಅರ್ಜಿಗಳನ್ನು ಪರಿಶೀಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಸರಳ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ, ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಅಪರ ಜಿಲ್ಲಾಧಿಕಾರಿ ಅಭಿಷೇಕ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಸುಜಾತಾ ಕೆ.ಆರ್., ಅನ್ನಪೂರ್ಣ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
