ಶಿವಮೊಗ್ಗ ವಿಮಾನ ನಿಲ್ದಾಣದಿಂದ ನ.21ರಿಂದ ವಿಮಾನ ಹಾರಾಟ ಸ್ಥಗಿತ; ಅಸಲಿ ಕಾರಣ ಬಿಚ್ಚಿಟ್ಟ ಸಚಿವ ಎಂ.ಬಿ. ಪಾಟೀಲ್ | Shivamogga airport flight services may stop from November 21 as Star Air plans to suspend operations. Minister MB Patil blames flaws in the Centre’s UDAN-2 policy.
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಿಂದ ನವೆಂಬರ್ 21ರಿಂದ ವಿಮಾನಯಾನ ಸೇವೆ ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಎದುರಾಗಿದೆ. ಪ್ರಸ್ತುತ ಶಿವಮೊಗ್ಗದಿಂದ ವಿಮಾನ ಹಾರಾಟ ನಡೆಸುತ್ತಿರುವ ಏಕೈಕ ಸಂಸ್ಥೆ ಸ್ಟಾರ್ ಏರ್ (Star Air), ತನ್ನ ವಿಮಾನಯಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ಬೆಳವಣಿಗೆ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದ್ದು, ವಿಮಾನ ಸೇವೆ ಸ್ಥಗಿತಕ್ಕೆ ಕೇಂದ್ರ ಸರ್ಕಾರದ ನೀತಿಯೇ ಕಾರಣ ಎಂದು ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆ ಸ್ಥಗಿತಗೊಳ್ಳುತ್ತಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ, ಕೇಂದ್ರ ಸರ್ಕಾರದ ಉಡಾನ್-2 (UDAN-2) ಯೋಜನೆಯಲ್ಲಿನ ನೀತಿ ದೋಷಗಳೇ ಇಂತಹ ಪರಿಸ್ಥಿತಿಗೆ ಕಾರಣ ಎಂದು ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣವನ್ನು ಅದಾನಿ ಸಂಸ್ಥೆಗೆ ವಹಿಸಲಾಗಿದೆ. ಇದೀಗ ಹುಬ್ಬಳ್ಳಿ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಕ್ರಿಯೆಯೂ ನಡೆಯುತ್ತಿದೆ. ಕಲಬುರಗಿ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರ್ಕಾರ ಸುಮಾರು 1,000 ಕೋಟಿ ರೂಪಾಯಿ ವೆಚ್ಚ ಮಾಡಿದ್ದು, ಅದನ್ನು ಕೇಂದ್ರ ಸರ್ಕಾರದ ಸುಪರ್ದಿಗೆ ನೀಡಲಾಗಿದೆ. ಆದರೆ ಇದರಿಂದ ರಾಜ್ಯಕ್ಕೆ ಯಾವುದೇ ಆದಾಯ ಬರುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದ ವಿಮಾನ ಸೇವೆ ಸ್ಥಗಿತಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಆರೋಪಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಈ ಎಲ್ಲ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಸಚಿವರು ತಿರುಗೇಟು ನೀಡಿದ್ದಾರೆ.
ಉಡಾನ್ ಯೋಜನೆಯ ಅವಧಿಯನ್ನು ಮೂರು ವರ್ಷಗಳಿಂದ ಐದು ವರ್ಷಗಳಿಗೆ ವಿಸ್ತರಿಸಬೇಕು. ನಂತರದ ಐದು ವರ್ಷಗಳ ಕಾಲ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಲಾ ಶೇ.50ರಷ್ಟು ವೆಚ್ಚವನ್ನು ಹಂಚಿಕೊಂಡು ಯೋಜನೆಯನ್ನು ಮುಂದುವರಿಸಿದರೆ ಉತ್ತಮ ಫಲಿತಾಂಶ ಸಿಗಲಿದೆ ಎಂಬ ಸಲಹೆಯನ್ನು ರಾಜ್ಯ ಸರ್ಕಾರ ನೀಡಿತ್ತು.
ಆದರೆ ಕೇಂದ್ರ ಸರ್ಕಾರ ಈ ಸಲಹೆಗೆ ಸೂಕ್ತ ಸ್ಪಂದನೆ ನೀಡಲಿಲ್ಲ. ಇದರ ಪರಿಣಾಮವಾಗಿ ದೇಶದಾದ್ಯಂತ 17 ವಿಮಾನ ನಿಲ್ದಾಣಗಳು ಕಾರ್ಯಾಚರಣೆ ಸ್ಥಗಿತಗೊಳಿಸುವ ಪರಿಸ್ಥಿತಿ ಎದುರಿಸಿವೆ ಎಂದು ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಶಿವಮೊಗ್ಗ, ರಾಯಚೂರು, ವಿಜಯಪುರ ವಿಮಾನ ನಿಲ್ದಾಣಗಳ ನಿರ್ವಹಣೆ ರಾಜ್ಯದ ಹೊಣೆ
ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡಿ ವಿಮಾನ ನಿಲ್ದಾಣಗಳನ್ನು ನಿರ್ಮಿಸಿದ ಬಳಿಕ ಅವುಗಳನ್ನು ಕೇಂದ್ರ ಸರ್ಕಾರದ ಸುಪರ್ದಿಗೆ ಒಪ್ಪಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯವನ್ನು ಸಚಿವರು ವ್ಯಕ್ತಪಡಿಸಿದ್ದಾರೆ.
ಹೀಗಾಗಿ ಶಿವಮೊಗ್ಗ, ರಾಯಚೂರು ಮತ್ತು ವಿಜಯಪುರ ವಿಮಾನ ನಿಲ್ದಾಣಗಳನ್ನು ರಾಜ್ಯ ಸರ್ಕಾರವೇ ನಿರ್ವಹಿಸುತ್ತಿದೆ. ಸ್ಥಗಿತಗೊಂಡಿದ್ದ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮತ್ತೆ ವಿಮಾನಯಾನ ಸೇವೆ ಆರಂಭಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ವತಿಯಿಂದ ಶೇ.80ರಷ್ಟು ಹಾಗೂ ರಾಜ್ಯ ಸರ್ಕಾರದಿಂದ ಶೇ.20ರಷ್ಟು ಅನುದಾನ ನೀಡಲಾಗಿದೆ ಎಂದು ವಿವರಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಸಾಮರ್ಥ್ಯವಿದ್ದರೆ ಇದೇ ಮಾದರಿಯಲ್ಲಿ ಅನುದಾನ ತಂದು ವಿಮಾನ ಸೇವೆ ಪುನರಾರಂಭಿಸಲಿ ಎಂದು ಸಚಿವ ಎಂ.ಬಿ. ಪಾಟೀಲ ಸವಾಲು ಹಾಕಿದ್ದಾರೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರ ವಿಮಾನಯಾನ ನೀತಿ ಮಂಡನೆ
ರಾಜ್ಯದಲ್ಲಿ ನಾಗರಿಕ ವಿಮಾನಯಾನ ಕ್ಷೇತ್ರದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಸಮಗ್ರ ವಿಮಾನಯಾನ ನೀತಿಯನ್ನು ರೂಪಿಸಿದೆ. ಈ ನೀತಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ರಾಜ್ಯ ಸರ್ಕಾರವೇ ನಿರ್ವಹಿಸುವ ವಿಮಾನ ನಿಲ್ದಾಣಗಳಿಗೆ ಅಗತ್ಯವಿರುವ ಅನುದಾನ, ಕಾರ್ಯಸಾಧ್ಯತಾ ಅಂತರ ನಿಧಿ (VGF), ಸಮರ್ಥ ಕಾರ್ಯಾಚರಣೆ ಸೇರಿದಂತೆ ಹಲವು ಪ್ರಮುಖ ಅಂಶಗಳನ್ನು ಈ ನೀತಿಯಲ್ಲಿ ಸೇರಿಸಲಾಗಿದೆ. ಈ ನೀತಿ ಜಾರಿಯಾದರೆ ದೇಶದ ಇತರ ರಾಜ್ಯಗಳಿಗೂ ಮಾದರಿಯಾಗಲಿದೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದ್ದಾರೆ.
