ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹6.84 ಲಕ್ಷ ದಂಡ! | A 24-year-old man was sentenced to 10 years of rigorous imprisonment and fined ₹6.84 lakh in a minor sexual assault case by a Shivamogga court. The victim will receive ₹10 lakh compensation.
ಶಿವಮೊಗ್ಗ: 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ 24 ವರ್ಷದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 6.84 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಇನ್ಸ್ಪೆಕ್ಟರ್ ಅಶ್ವತ್ಥಗೌಡ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್ಶೀಟ್) ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ವೇಳೆ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಉಭಯ ಪಕ್ಷಗಳ ವಾದ-ಪ್ರತಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನಿಂಗನಗೌಡ ಬಿ. ಪಾಟೀಲ್ ಅವರು ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 6,84,000 ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ.
ಅಲ್ಲದೆ, ದಂಡದ ಮೊತ್ತದಲ್ಲಿ 6 ಲಕ್ಷ ರೂಪಾಯಿಗಳನ್ನು ಸಂತ್ರಸ್ತ ಬಾಲಕಿಗೆ ಪರಿಹಾರವಾಗಿ ನೀಡುವಂತೆ ಹಾಗೂ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 4 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ನ್ಯಾಯಾಲಯ ಆದೇಶಿಸಿದೆ.
