ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿದರು.
ಸಭೆಯ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಆರಂಭಿಸಿದ್ದೆವು. ಅಕ್ಟೋಬರ್ 7ರಂದು ಮುಕ್ತಾಯಕ್ಕೆ ತೀರ್ಮಾನಿಸಿದ್ದೆವು. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ.97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿವೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18 ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದು ತಿಳಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್