ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ
ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗಳ ಸ್ಥಿತಿಯನ್ನು ಪರಿಶೀಲಿಸಲು ಹೊಸನಗರ ತಾಲೂಕು ತಹಶೀಲ್ದಾರ್ ಭರತ್ ರಾಜ್ ಇಂದು ದಿಡೀರ್ ಭೇಟಿ ನೀಡಿದರು.
ತಹಶೀಲ್ದಾರ್ ಮೊದಲು ಆಸ್ಪತ್ರೆಗೆ ಬಂದಿದ್ದ ಹೊರ ರೋಗಿಗಳೊಂದಿಗೆ ಮಾತನಾಡಿ ಚಿಕಿತ್ಸೆ, ಔಷಧಿ ಲಭ್ಯತೆ ಕುರಿತಂತೆ ಮಾಹಿತಿ ಪಡೆದರು. ನಂತರ ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯ ದಿನ ನಿತ್ಯದ ಕಾರ್ಯವೈಖರಿ ಹಾಗೂ ಸಿಬ್ಬಂದಿ ನಿಯೋಜನೆ ಬಗ್ಗೆ ವಿಚಾರಿಸಿದರು. ಬಳಿಕ ಒಳರೋಗಿಗಳನ್ನೂ ಭೇಟಿ ಮಾಡಿ ಅವರ ಆರೋಗ್ಯ ಸ್ಥಿತಿ ಹಾಗೂ ನೀಡಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಸೇವೆಗಳು ಒಟ್ಟಾರೆ ತೃಪ್ತಿಕರವಾಗಿವೆ. ಜನರ ಅಸಮಾಧಾನ, ವಿಶೇಷವಾಗಿ ರಾತ್ರಿ ವೇಳೆಯ ಚಿಕಿತ್ಸೆ ಕುರಿತ ದೂರನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು. ರಾತ್ರಿ ವೇಳೆ ಅಪಘಾತಗಳು ಸಂಭವಿಸಿದಾಗ ಅನುಭವಹೊಂದಿದ ವೈದ್ಯರ ಲಭ್ಯತೆ ಕುರಿತ ಪ್ರಶ್ನೆಗೆ, “ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ,” ಎಂದರು.
ಈ ಭೇಟಿಯಲ್ಲಿ ವೈದ್ಯಾಧಿಕಾರಿ ಆಂಜನೇಯ್ ಕುಮಾರ್, ಉಪ ತಹಶೀಲ್ದಾರ್ ಹಾಗೂ ರಾಜಸ್ವ ನಿರೀಕ್ಷಕ ಅಫ಼್ರೋಜ್ ಅಹಮದ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್